ಕರ್ನಾಟಕದ 1,351 ಸ್ಥಳಗಳು ಭೂಕುಸಿತದ ಅಪಾಯದಲ್ಲಿವೆ ಎಂದು ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ) ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್ ಸಂಸ್ಥೆ ವರದಿ ಹೇಳಿದೆ.
ಮಂಗಳವಾರ ವಿಧಾನಪರಿಷತ್ ನಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಸಮೀಕ್ಷೆ ವರದಿಯನ್ನು ಪ್ರಸ್ತಾಪಿಸಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಅತೀ ಹೆಚ್ಚು ಭೂಕುಸಿತ ಸ್ಥಳಗಳನ್ನು ಗುರುತಿಸಲಾಗಿದೆ ಎಂದರು.
ಭೂಕುಸಿತ ಘಟನೆಗಳ ಕುರಿತು ಬಿಜೆಪಿ ಸದಸ್ಯ ಸಿಟಿ ರವಿ, ಎನ್. ರವಿಕುಮಾರ್, ಪ್ರತಿಪಕ್ಷ ನೂತನ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ ಮಂಡಿಸಿದ ಗಮನ ಸೆಳೆಯುವ ಪ್ರಸ್ತಾವನೆಗೆ ಉತ್ತರಿಸಿದ ಸಚಿವ ಕೃಷ್ಣ ಭೈರೇಗೌಡ, ಮಳೆಗಾಲದಲ್ಲಿ ‘ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಅತೀ ಹೆಚ್ಚು ಭೂಕುಸಿತದ ಸ್ಥಳಗಳನ್ನು ಗುರುತಿಸಲಾಗಿದ್ದು, ಈ ಸ್ಥಳಗಳ ಅಭಿವೃದ್ಧಿಗೆ ಶೀಘ್ರದಲ್ಲಿಯೇ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಭಾರೀ ಮಳೆ, ಮೇಘ ಸ್ಫೋಟ ಸೇರಿದಂತೆ ವಿವಿಧ ಕಾರಣಗಳಿಂದ ನಿಸರ್ಗದ ದಟ್ಟ ಪ್ರದೇಶಗಳಲ್ಲಿ ರಸ್ತೆ ನಿರ್ಮಾಣ, ನದಿ ಹರಿಯುವುದು ಸೇರಿದಂತೆ ನಾನಾ ಕಾರಣಗಳಿಂದ ಭೂಕುಸಿತ ಸಂಭವಿಸುತ್ತಿದ್ದು, ಇಂತಹ 1000ಕ್ಕೂ ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಅವರು ವಿವರಿಸಿದರು.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಳಿಯ ಶಿರೂರು ನಲ್ಲಿ ಸಂಭವಸಿದ ಭೂಕುಸಿತದಿಂದ 10 ಮಂದಿ ಮೃತಪಟ್ಟಿದ್ದು, 8 ಮಂದಿಯ ಶವ ಪತ್ತೆಹಚ್ಚಲಾಗಿದೆ. ಉಳಿದ ಮೂವರಿಗಾಗಿ ಶೋಧ ಕಾರ್ಯ ನಡೆದಿದೆ ಎಂದು ಸ್ಪಷ್ಟಪಡಿಸಿದ ಅವರು, ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿ ರಸ್ತೆ, ಶೃಂಗೇರಿ ಹೊರನಾಡು ಮಧ್ಯೆ ಸಂಪರ್ಕ ಕಲ್ಪಿಸುವ ರಸ್ತೆ, ಮಂಗಳೂರು ಮತ್ತು ಶೃಂಗೇರಿ ಮಧ್ಯ ಸಂಪರ್ಕ ಕಲ್ಪಿಸುವ ರಸ್ತೆ ಸೇರಿದಂತೆ ವಿವಿಧೆಡೆ ಭೂಕುಸಿತ ಪ್ರಕರಣಗಳು ವರದಿಯಾಗಿವೆ ಎಂದು ವಿವರಿಸಿದರು.