ಅತೀ ವೇಗವಾಗಿ ಸಾಗುತ್ತಿದ್ದ ಡಬಲ್ ಡೆಕ್ಕರ್ ಬಸ್ ಹಾಲಿನ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ 18 ಮಂದಿ ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಉನ್ನಾವೊದಲ್ಲಿ ಸಂಭವಿಸಿದೆ.
ಲಕ್ನೋ-ಆಗ್ರಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬುಧವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು, 19 ಮಂದಿ ಗಾಯಗೊಂಡಿದ್ದಾರೆ.
ಬಿಹಾರದ ಮೋತಿಹಾರಿಯಿಂದ ದೆಹಲಿಗೆ ಹೊರಟ್ಟಿದ್ದ ಬಸ್ ಉತ್ತರ ಪ್ರದೇಶದ ಉನ್ನಾವೊ ಬಳಿಯ ಗ್ರಹ ಎಂಬ ಗ್ರಾಮದ ಬಳಿ ಹಾಲಿನ ಟ್ಯಾಂಕರ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಪ್ರಯಾಣಿಕರು ಬಸ್ ನಿಂದ ಹೊರಗೆ ಹಾರಿ ಬಿದ್ದಿದ್ದಾರೆ. ಘಟನೆಯ ಮಾಹಿತಿ ಪಡೆಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ.
ಡಿಕ್ಕಿ ಹೊಡೆದ ಸ್ಥಳದಲ್ಲಿ ಭೀಕರ ದೃಶ್ಯ ಸೃಷ್ಟಿಯಾಗಿದ್ದು, ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತಪಟ್ಟವರ ದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.ಘಟನೆಗೆ ಬಸ್ ಅತೀ ವೇಗವಾಗಿ ಸಾಗುತ್ತಿತ್ತು ಇದರಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಪ್ರಧಾನಿ ಕಚೇರಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರ ಚಿಕಿತ್ಸೆಗೆ ತಲಾ 50 ಸಾವಿರ ರೂ. ಪರಿಹಾರ ಮೊತ್ತ ಬಿಡುಗಡೆ ಮಾಡಲಾಗಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆಗೆ ಆಘಾತ ವ್ಯಕ್ತಪಡಿಸಿದ್ದಾರೆ.