ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಶುಕ್ರವಾರ ಮುಂಜಾನೆ ಕರ್ನೂಲ್ ಚಿನ್ನಟೇಕೂರು ಬಳಿ ಬೈಕ್ ಗೆ ಕಾವೇರಿ ವೋಲ್ವೊ ಬಸ್ ಡಿಕ್ಕಿ ಹೊಡೆದಿದ್ದರಿಂದ ಬೆಂಕಿ ಹೊತ್ತಿಕೊಂಡಿದ್ದರಿಂದ ದುರಂತ ಸಂಭವಿಸಿದೆ.
ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದರಿಂದ ಇಂಧನ ಟ್ಯಾಂಕ್ ಸ್ಫೋಟಗೊಂಡಿದೆ. ಕೂಡಲೇ ಬೆಂಕಿ ಬಸ್ ಗೆ ವ್ಯಾಪಿಸಿದ್ದು, ಇಡೀ ಬಸ್ ಧಗಧಗನೆ ಸುಟ್ಟು ಕರಕಲಾಗಿದೆ. 11 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ರಭಸಕ್ಕೆ ಬಸ್ ಗೆ ಬಾಗಿಲು ಜಾಮ್ ಆಗಿದ್ದರಿಂದ ಪ್ರಯಾಣಿಕರು ತಪ್ಪಿಸಿಕೊಳ್ಳಲು ಕಷ್ಟವಾಗಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಲು ಕಾರಣ ಎಂದು ಹೇಳಲಾಗಿದೆ. ವೋಲ್ವೋ ಬಸ್ ಕಿಟಕಿಯ ಗಾಜುಗಳು ಲಾಕ್ ಆಗಿದೆ. ಹೀಗಿದ್ದರೂ ಬೆಂಕಿ ಕಾಣಿಸಿದ ಕೂಡಲೇ ಕೆಲವು ಪ್ರಯಾಣಿಕರು ಗಾಜನ್ನು ಒಡೆದು ಕೆಳಗೆ ಹಾರಿ ಜೀವ ಉಳಿಸಿಕೊಂಡಿದ್ದಾರೆ.
ಬಸ್ಸಿನಲ್ಲಿದ್ದ 23 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಗೊಂಡವರನ್ನು ಕರ್ನೂಲ್ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಪ್ರಯಾಣಿಕರು ಹೈದರಾಬಾದ್ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಅಗ್ನಿಶಾಮಕ ದಳ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ತಂಡಗಳು ಸ್ಥಳಕ್ಕೆ ಬರುವಷ್ಟರಲ್ಲಿ ಬಸ್ಸು ಬಹುತೇಕ ಸುಟ್ಟುಹೋಗಿತ್ತು. ಅಧಿಕಾರಿಗಳು ಮೃತ ವ್ಯಕ್ತಿಗಳ ಗುರುತು ಪತ್ತೆ ಹಚ್ಚುವ ಕೆಲಸ ಆರಂಭಿಸಿದ್ದಾರೆ. ಸ್ಲೀಪರ್ ಕೋಚ್ ಬಸ್ ಆಗಿದ್ದರಿಂದ ಪ್ರಯಾಣಿಕರು ನಿದ್ದೆ ಮಾಡುತ್ತಿದ್ದರು ಎಂದು ಹೇಳಲಾಗಿದೆ.
ಪ್ರಧಾನಿ, ರಾಷ್ಟ್ರಪತಿ, ಸಿಎಂ ಆಘಾತ
ಬಸ್ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮರ್ಮು, ಆಂಧ್ರಪ್ರದೇಶ ಸಿಎಂ ಹಾಗೂ ಕರ್ನಾಟಕ ಸಿಎಂ ಸಿದ್ದರಾಮಯ್ಯ ಮುಂತಾದವರು ಶೋಕ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಪರಿಹಾರ ನಿಧಿಯಿಂದ ಮೃತ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಮೊತ್ತ ಘೋಷಿಸಿದೆ.



