ಭೂ ವಿವಾದದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು 21 ದಲಿತರ ಮನೆಗಳಿಗೆ ಬೆಂಕಿ ಹಚ್ಚಿ ಹಾನಿ ಮಾಡಿದ ಘಟನೆ ಬಿಹಾರದ ನಾವಡ ಜಿಲ್ಲೆಯಲ್ಲಿ ನಡೆದಿದೆ.
ಘಟನೆ ಬೆನ್ನಲ್ಲೇ ಪೊಲೀಸರು ಪ್ರಕರಣದ ಪ್ರಮುಖ ಆರೋಪಿ ಸೇರಿದಂತೆ 15 ಮಂದಿಯನ್ನು ಬಂಧಿಸಿದ್ದಾರೆ. ಆರಂಭದಲ್ಲಿ ಸುಮಾರು 80 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ವರದಿ ಆಗಿತ್ತು. ನಂತರ ಪೊಲೀಸರು ನೀಡಿದ ಅಧಿಕೃತ ಹೇಳಿಕೆಯಲ್ಲಿ 21 ಮನೆಗಳು ಭಸ್ಮವಾಗಿದೆ ಎಂದು ಹೇಳಿದೆ.
ಘಟನಾ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜಿಸುವ ಮೂಲಕ ಬಿಗಿ ಭದ್ರತೆ ನೀಡಿದ್ದಾರೆ.
ಭೂ ವಿವಾದ ಬಗೆಹರಿಸಿಕೊಳ್ಳಲು ಒತ್ತಾಯಿಸಿದ ದುಷ್ಕರ್ಮಿಗಳು ಒಪ್ಪದ ದಲಿತ ಕುಟುಂಬಗಳು ವಾಸವಿದ್ದ ಮನೆಗಳಿಗೆ ಬೆಂಕಿ ಹಚ್ಚಿ ದುಷ್ಕೃತ್ಯ ಮೆರೆದಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವು ವರದಿಯಾಗಿಲ್ಲ.
ದಲಿತರ ಮನೆಗಳಿಗೆ ಬೆಂಕಿ ಹಚ್ಚಿದ ಘಟನೆಗೆ ಸ್ಥಳೀಯ ಕಾಂಗ್ರೆಸ್ ಮತ್ತು ಆರ್ ಜೆಡಿ ಬಿಹಾರದಲ್ಲಿ ದಲಿತ ವಿರೋಧಿ ಸರ್ಕಾರವಿದೆ. ಜಂಗಲ್ ರಾಜ್ ನಡೆಯುತ್ತಿದೆ ಎಂದು ಆರೋಪಿಸಿವೆ.
ಮತ್ತೊಂದೆಡೆ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಕರೆಯಲಾಗಿದ್ದು, ವಿವಾದ ಬಗೆಹರಿಸುವ ಜೊತೆಗೆ ಮನೆ ಕಳೆದುಕೊಂಡವರಿಗೆ ಪರಿಹಾರ ನೀಡುವ ಬಗ್ಗೆ ಚರ್ಚೆ ನಡೆದಿದೆ.