ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ವಿರುದ್ಧದ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಪೊಲೀಸರು ನ್ಯಾಯಾಲಯಕ್ಕೆ 2144 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಪೂರ್ಣಗೊಳಿಸಿರುವ ತನಿಖಾಧಿಕಾರಿ ಸುಮಾರಾಣಿ 42ನೇ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶುಕ್ರವಾರ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಾರ್ಜ್ ಶೀಟ್ ನಲ್ಲಿ 137 ಸಾಕ್ಷಿಗಳ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ.
ಜೆಡಿಎಸ್ ನಿಂದ ಹಾಸನ ಸಂಸದರಾಗಿದ್ದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪೆನ್ ಡ್ರೈವ್ ಬೆಳಕಿಗೆ ಬಂದಿತ್ತು. ತೀವ್ರ ವಿವಾದದ ಹಿನ್ನೆಲೆಯಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಸೋಲುಂಡಿದ್ದರು.
ಚುನಾವಣೆ ಮುಗಿಯುತ್ತಿದ್ದಂತೆ ವಿದೇಶಕ್ಕೆ ಹಾರಿದ್ದ ಪ್ರಜ್ವಲ್ ರೇವಣ್ಣ ನಂತರ 35 ದಿನಗಳ ನಂತರ ತವರಿಗೆ ಮರಳಿದ್ದರು. ಬರುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದಿದ್ದು, ಕಳೆದ ಮೂರು ತಿಂಗಳಿಂದ ಜೈಲುವಾಸದಲ್ಲಿದ್ದಾರೆ.