ರಾಜ್ಯಕ್ಕೆ ಭೀಕರ ಬರಗಾಲದ ಪರಿಸ್ಥಿತಿ ಎದುರಾದರೂ ಸಹ ಕೇಂದ್ರ ಬರಪರಿಹಾರ ಬಿಡುಗಡೆ ಮಾಡಲಿಲ್ಲ. ಕರ್ನಾಟಕದಲ್ಲಿ 48 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿ, 35 ಸಾವಿರ ಕೋಟಿ ನಷ್ಟವಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ನಮ್ಮ ಸಂಪನ್ಮೂಲಗಳಿಂದ ತಲಾ 2 ಸಾವಿರದಂತೆ 34 ಲಕ್ಷ ರೈತರಿಗೆ ಪರಿಹಾರ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಇಂದು ಶಿವಮೊಗ್ಗ ನಗರದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ರಾಜ್ಯಕ್ಕೆ 18,172 ಕೋಟಿ ರೂ.ಗಳ ಬರ ಪರಿಹಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಎನ್ ಡಿ ಆರ್ ಎಫ್ ಪರಿಹಾರ ರಾಜ್ಯಕ್ಕೆ ನೀಡುವ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು ಎಂದರು.
ರಾಜ್ಯಕ್ಕಾದ ಅನ್ಯಾಯವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ನಡೆಸಿದ ಹೋರಾಟಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರ ಕೇವಲ 3454 ಕೋಟಿ ರೂ.ಗಳನ್ನು ನೀಡಿ ಮತ್ತೆ ಮತ್ತೆ ದ್ರೋಹ ಮಾಡುತ್ತಲೇ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, AICC ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್,AICC ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಸಚಿವ ಮಧು ಬಂಗಾರಪ್ಪ, ಶಾಸಕರಾದ ಗೋಪಾಲಕೃಷ್ಣ ಬೇಳೂರು, ಬಿ.ಕೆ.ಸಂಗಮೇಶ್, ವಿಧಾನ ಪರಿಷತ್ ಸದಸ್ಯರೂ ಪಕ್ಷದ ಕಾರ್ಯಾಧ್ಯಕ್ಣರೂ ಆದ ಮಂಜುನಾಥ್ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್ ಸೇರಿ ಜಿಲ್ಲಾ ಮುಖಂಡರುಗಳು ಉಪಸ್ಥಿತರಿದ್ದರು.