ಭಾರತ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ 2023-24ನೇ ಸಾಲಿನಲ್ಲಿ 66 ಕೋಟಿ ರೂ. ತೆರಿಗೆ ಪಾವತಿಸಿದ್ದಾರೆ. ಈ ಮೂಲಕ ದೇಶದಲ್ಲಿ ತೆರಿಗೆ ಪಾವತಿಯಲ್ಲಿ ಅಗ್ರಸ್ಥಾನ ಪಡೆದ ಕ್ರೀಡಾಪಟು ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
ಟಿ- 20 ಕ್ರಿಕೆಟ್ ಗೆ ವಿದಾಯ ಹೇಳಿರುವ ವಿರಾಟ್ ಕೊಹ್ಲಿ, ಕೊನೆಯ ಬಾರಿಗೆ ಭಾರತ ತಂಡದಲ್ಲಿ ಕಾಣಿಸಿಕೊಂಡಿದ್ದು ಶ್ರೀಲಂಕಾ ಸರಣಿಯಲ್ಲಿ. ವಿಶ್ರಾಂತಿಯಲ್ಲಿರುವ ಕೊಹ್ಲಿ ಸೆಪ್ಟೆಂಬರ್ 19ರಿಂದ ಆರಂಭಗೊಳ್ಳಲಿರುವ ಬಾಂಗ್ಲಾದೇಶ ಸರಣಿಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
ವಿರಾಟ್ ಕೊಹ್ಲಿ ಟಿ-20 ವಿಶ್ವಕಪ್ ಗೆದ್ದ ನಂತರ ಕಿರು ಕ್ರಿಕೆಟ್ ಗೆ ವಿದಾಯ ಹೇಳಿದರೂ ಅವರ ಜನಪ್ರಿಯತೆ ಕಡಿಮೆ ಆಗಿಲ್ಲ. ದೇಶದಲ್ಲೇ ಅತ್ಯಂತ ಹೆಚ್ಚು ಆದಾಯ ಗಳಿಸುತ್ತಿರುವ ಕೊಹ್ಲಿ ತೆರಿಗೆ ಪಾವತಿಯಲ್ಲೂ ಮುಂಚೂಣಿಯಲ್ಲಿದ್ದಾರೆ.
ತೆರಿಗೆ ಪಾವತಿಯಲ್ಲಿ ಕೊಹ್ಲಿ ನಂತರ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಇದ್ದಾರೆ.
ಮಹೇಂದ್ರ ಸಿಂಗ್ ಧೋನಿ ಕಳೆದ ಆರ್ಥಿಕ ವರ್ಷದಲ್ಲಿ 38 ಕೋಟಿ ರೂ. ತೆರಿಗೆ ಪಾವತಿಸಿದ್ದರೆ, ಸಚಿನ್ ತೆಂಡೂಲ್ಕರ್ 28 ಕೋಟಿ ರೂ. ತೆರಿಗೆ ಕಟ್ಟಿದ್ದಾರೆ.
ಮಾಜಿ ನಾಯಕ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ 23 ಕೋಟಿ ರೂ. ಪಾವತಿಸಿ ನಾಲ್ಕನೇ ಸ್ಥಾನದಲ್ಲಿದ್ದರೆ, ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ 13 ಕೋಟಿ ಪಾವತಿಸಿ ಅಗ್ರ 5ರಲ್ಲಿ ಸ್ಥಾನ ಗಳಿಸಿದ್ದಾರೆ.