ಮ್ಯಾನ್ಮರ್, ಗಾಜಾ ಮತ್ತು ಭಾರತ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಮುಸ್ಲಿಮರು ಸಂಕಷ್ಟದಲ್ಲಿದ್ದಾರೆ ಎಂದು ಇರಾನ್ ಸುಪ್ರೀಂ ನಾಯಕ ಅಯತುಲ್ಲಾಹ್ ಅಲಿ ಖಮೇನಿ ಅವರ ಹೇಳಿಕೆಗೆ ಭಾರತ ತೀವ್ರ ಖಂಡನೆ ವ್ಯಕ್ತಪಡಿಸಿದೆ.
ಪ್ರವಾದಿ ಮೊಹಮ್ಮದರ ಜಯಂತಿ ಅಂಗವಾಗಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಭಾರತ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಮುಸ್ಲಿಮರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಹೇಳಿದರು.
ಇರಾನ್ ಮುಖ್ಯಸ್ಥರ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಭಾರತದ ವಿದೇಶಾಂಗ ಸಚಿವಾಲಯ, ತಪ್ಪು ಮಾಹಿತಿ ಮತ್ತು ಸ್ವೀಕಾರ್ಹವಲ್ಲ ಎಂದು ಹೇಳಿದೆ.
ಭಾರತದಲ್ಲಿನ ಅಲ್ಪಸಂಖ್ಯಾತರ ಕುರಿತು ಇರಾನ್ ಮುಖ್ಯಸ್ಥರು ನೀಡಿರುವ ಹೇಳಿಕೆಯನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ. ಇತರೆ ದೇಶಗಳಲ್ಲಿನ ಅಲ್ಪಸಂಖ್ಯಾತರ ಬಗ್ಗೆ ಹೇಳಿಕೆ ನೀಡುವ ಮುನ್ನ ನಿಮ್ಮದೇ ದೇಶದ ದಾಖಲೆಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಿ ಎಂದು ಭಾರತ ವಿದೇಶಾಂಗ ಸಚಿವಾಲಯ ಖಾರವಾಗಿ ಪ್ರತಿಕ್ರಿಯಿಸಿದೆ.
ಕೆಲವು ದಿನಗಳ ಹಿಂದೆಯಷ್ಟೇ ಇರಾನ್ ನಲ್ಲಿ ಸಾವಿರಾರು ಮುಸ್ಲಿಂ ಮಹಿಳೆಯರು ಮಾಶಾ ಅಮಿನ್ ಅವರ ಎರಡನೇ ಪುಣ್ಯತಿಥಿ ಅಂಗವಾಗಿ ಕೈಕವಚ, ಹಿಜಾಬ್ ಕಡ್ಡಾಯ ಖಂಡಿಸಿ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದರು.