ಸತ್ಯ ಹೊರಗೆ ಬರಲಿದೆ. ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ ಎಂದು ಹೈಕೋರ್ಟ್ ತೀರ್ಪಿನ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಮುಡಾ ಪ್ರಕರಣದಲ್ಲಿ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್, ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿತ್ತು.
ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ರಾಜಕೀಯ ಪ್ರೇರಿತ. ನಾನು ತಪ್ಪು ಮಾಡಿಲ್ಲ ಎಂದು ಹೇಳುತ್ತಲೇ ಬಂದಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ ಎಂದು ಪುನರುಚ್ಚರಿಸಿದರು.
ರಾಜ್ಯಪಾಲರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ರಾಜ್ಯಪಾಲರ ಕಚೇರಿ ಬಿಜೆಪಿ ಕಚೇರಿಯಾಗಿದೆ. ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ನ್ಯಾಯಾಲಯ ರಾಜ್ಯಪಾಲರು 218 ಬಿಎನ್ ಎಸ್ ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ. ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17 ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.