ಖಾಲಿ ಇರುವ 16,000 ಹುದ್ದೆಗಳ ಭರ್ತಿ ಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದ್ದು, ನಮ್ಮ ರಾಜ್ಯದ ಯುವಕರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ದಾವಣಗೆರೆಯಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ಬುಧವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇನ್ನು ಮುಂದೆ ರೈಲ್ವೆ ನೇಮಕಾತಿ ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯಲು ಅವಕಾಶ ನೀಡಲಾಗುವುದು ಎಂದರು.
ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿದ್ದು, 15 ಲಕ್ಷ ಜನರು ಪಿಂಚಣಿ ಪಡೆಯುತ್ತಿದ್ದಾರೆ. ಖಾಲಿ ಇರುವ 16,000 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದೆ. ಕನ್ನಡದಲ್ಲೇ ಪರೀಕ್ಷೆ ಬರೆಯಲು ಮತ್ತು ಓದಲು ಪುಸ್ತಕಗಳು ಸಿಗುತ್ತವೆ, ಇದನ್ನು ಉಪಯೋಗಿಸಿಕೊಳ್ಳಿ. ಮುಂದಿನ ದಿನಗಳಲ್ಲಿ ಖಾಲಿ ಇರುವ 46,000 ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಎಂದು ಅವರು ಹೇಳಿದರು.
ತುಮಕೂರು-ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ. ನೇರ ರೈಲು ಮಾರ್ಗವು ನಿಧಾನಗತಿಯಲ್ಲಿ ಸಾಗುತ್ತಿದ್ದು, ಕಳೆದ ಎರಡೂವರೆಗೆ ತಿಂಗಳಿಂದ ಇದರ ಪ್ರಗತಿ ವೇಗ ಹೆಚ್ಚಿಸಲಾಗಿದೆ ಎಂದು ಸೋಮಣ್ಣ ವಿವರಿಸಿದರು.
ತುಮಕೂರು-ಚಿತ್ರದುರ್ಗ- ದಾವಣಗೆರೆ ಯೋಜನೆಗೆ ಒಟ್ಟು 2406.73 ಎಕರೆ ಭೂಮಿ ಬೇಕಾಗಿದ್ದು, ಈಗಾಗಲೇ 2119.16 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. 287.54 ಎಕರೆ ಸ್ವಾಧೀನ ಮಾಡಿಕೊಳ್ಳಬೇಕಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಹಾದುಹೋಗುವ 263.78 ಎಕರೆ ಜಮೀನಿನಲ್ಲಿ 246.20 ಎಕರೆ ಸ್ವಾಧೀನ ಪಡಿಸಿಕೊಂಡಿದ್ದು, 17.58 ಎಕರೆಯ ಸ್ವಾಧೀನ ಪ್ರಕ್ರಿಯೆ ವಿವಿಧ ಹಂತದಲ್ಲಿದೆ ಎಂದು ವಿವರಿಸಿದರು.