ಹಿರಿಯರ ಅನುಪಸ್ಥಿತಿಯಲ್ಲಿ ಅಖಾಡಕ್ಕೆ ಇಳಿದ ಭಾರತ ಯುವ ಪಡೆ 7 ವಿಕೆಟ್ ಗಳಿಂದ ಬಾಂಗ್ಲಾದೇಶ ತಂಡವನ್ನು ಸೋಲಿಸಿ ಮೂರು ಪಂದ್ಯಗಳ ಟಿ-20 ಸರಣಿಯಲ್ಲಿ ಗೆಲುವಿನ ಆರಂಭ ಪಡೆದಿದೆ.
ಗ್ವಾಲಿಯರ್ ನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ತಂಡವನ್ನು 127 ರನ್ ಗಳಿಗೆ ಆಲೌಟ್ ಮಾಡಿದ ಭಾರತ ತಂಡ 11.5 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.
ರೋಹಿತ್ ಶರ್ಮ, ವಿರಾಟ್ ಕೊಹ್ಲಿ ಸೇರಿದಂತೆ ಪ್ರಮುಖ ಆಟಗಾರರಿಲ್ಲದೇ ಕಣಕ್ಕಿಳಿದ ಭಾರತ ತಂಡಕ್ಕೆ ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮ ಸಾಧಾರಣ ಆರಂಭ ನೀಡಿದರು. ಸ್ಯಾಮ್ಸನ್ 19 ಎಸೆತಗಳಲ್ಲಿ 6 ಬೌಂಡರಿ ಸಹಾಯದಿಂದ 29 ರನ್ ಗಳಿಸಿ ಔಟಾದರೆ, ಅಭಿಷೇಕ್ ಶರ್ಮ 7 ಎಸೆತಗಳಲ್ಲಿ 2 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 16 ರನ್ ಸಿಡಿಸಿ ನಿರ್ಗಮಿಸಿದರು.
ನಾಯಕ ಸೂರ್ಯಕುಮಾರ್ ಯಾದವ್ 14 ಎಸೆತಗಳಲ್ಲಿ 2 ಬೌಂಡರಿ ಮತ್ತು 3 ಸಿಕ್ಸರ್ ಒಳಗೊಂಡ 29 ರನ್ ಬಾರಿಸಿ ಔಟಾದರೆ, ನಿತಿಶ್ ಕುಮಾರ್ ರೆಡ್ಡಿ (16) ಮತ್ತು ಹಾರ್ದಿಕ್ ಪಾಂಡ್ಯ 16 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್ ಸಹಾಯದಿಂದ ಅಜೇಯ 39 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಬಾಂಗ್ಲಾದೇಶ ತಂಡ ವರುಣ್ ಚಕ್ರವರ್ತಿ ಮತ್ತು ಅರ್ಷದೀಪ್ ಸಿಂಗ್ ತಲಾ 3 ವಿಕೆಟ್ ಉರುಳಿಸಿ ಅಲ್ಪ ಮೊತ್ತಕ್ಕೆ ಕಟ್ಟಿ ಹಾಕಿದರು. ಬಾಂಗ್ಲಾ ಪರ ಮೆಹದಿ ಹಸನ್ (35) ಮತ್ತು ನಜ್ಮುಲ್ ಹುಸೇನ್ ಶಾಂತೊ (27) ಮಾತ್ರ ತಕ್ಕಮಟ್ಟಿಗೆ ಹೋರಾಟ ನಡೆಸಿದರು.