ಚನ್ನಪಟ್ಟಣ ವಿಧಾನಸಭೆಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಹಿಂದೆ ಸರಿದ ಕಾರಣ ಬಿಜೆಪಿ ಸಿಪಿ ಯೋಗೇಶ್ವರ್ ಸ್ಪರ್ಧಿಸುವ ಸಾಧ್ಯತೆ ಇದೆ.
ಕರ್ನಾಟಕದ ವಿಧಾನಸಭೆಯ 3 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿಪಕ್ಷವಾದ ಜೆಡಿಎಸ್ ಗೆ ಚನ್ನಪಟ್ಟಣ ಕ್ಷೇತ್ರವನ್ನು ಬಿಜೆಪಿ ಬಿಟ್ಟುಕೊಟ್ಟಿದೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಲು ಸಿಪಿ ಯೋಗೇಶ್ವರ್ ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸುವಂತೆ ಯೋಗೇಶ್ವರ್ ಗೆ ಆಹ್ವಾನ ನೀಡಿದೆ ಎಂದು ಹೇಳಲಾಗಿದೆ.
ಚನ್ನಪಟ್ಟಣದಿಂದ ಸ್ಪರ್ಧಿಸಿದ್ದ ಎಚ್.ಡಿ. ಕುಮಾರಸ್ವಾಮಿ ಲೋಕಸಭೆಯಲ್ಲಿ ಜಯ ಸಾಧಿಸಿ ಕೇಂದ್ರ ಸಚಿವರಾಗಿರುವುದರಿಂದ ಈ ಕ್ಷೇತ್ರವನ್ನು ಉಳಿಸಿಕೊಳ್ಳುವ ಒತ್ತಡದಲ್ಲಿದ್ದಾರೆ. ಸತತ ಸೋಲುಂಡಿರುವ ಪುತ್ರ ನಿಖಿಲ್ ಕುಮಾರಸ್ವಾಮಿ ಈ ಕ್ಷೇತ್ರ ಕೈ ಬಿಟ್ಟು ಹೋಗಬಾರದು ಎಂಬ ಕಾರಣಕ್ಕೆ ಸ್ಪರ್ಧಿಸದೇ ಇರಲು ನಿರ್ಧರಿಸಿದ್ದಾರೆ.
ಚನ್ನಪಟ್ಟಣದಲ್ಲಿ ಜೆಡಿಎಸ್ ಗೆ ಸೂಕ್ತ ಅಭ್ಯರ್ಥಿ ಇಲ್ಲದ ಕಾರಣ ಸಿಪಿ ಯೋಗೇಶ್ವರ್ ಅವರನ್ನೇ ಜೆಡಿಎಸ್ ನಿಂದ ಸ್ಪರ್ಧಿಸುವಂತೆ ಆಹ್ವಾನಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಎಚ್.ಡಿ ಕುಮಾರಸ್ವಾಮಿ ಜೆಡಿಎಸ್ ಪಕ್ಷದ ಮುಖಂಡರ ಸಭೆಯನ್ನು ಮತ್ತೊಮ್ಮೆ ಕರೆದಿದ್ದು, ಶೀಘ್ರದಲ್ಲೇ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳವ ಸಾಧ್ಯತೆ ಇದೆ. ಒಂದು ವೇಳೆ ಟಿಕೆಟ್ ನೀಡಿದರೆ ಮಂಗಳವಾರ ಅಥವಾ ಬುಧವಾರ ನಾಮಪತ್ರ ಸಲ್ಲಿಸಲು ಯೋಗೇಶ್ವರ್ ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.