ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಯೂನಿಯನ್ ಬ್ಯಾಂಕ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ಯೂನಿಯನ್ ಬ್ಯಾಂಕ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ ೩೦ರಂದು ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ಬುಧವಾರ ತೀರ್ಪು ನೀಡಿದ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತು.
ಬೆಂಗಳೂರು ಪೂರ್ವ ವಲಯದ ಸಿಬಿಐ ಡಿಜಿಎಂ ಜೆ. ಮಹೇಶ್ ಈ ಹಿಂದೆಯೇ ಸರ್ಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು, ಖಾಸಗಿ ವ್ಯಕ್ತಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿ ದೂರಿನಲ್ಲಿ ಉಲ್ಲೇಖಿಸಿದ್ದರು.
ಯೂನಿಯನ್ ಬ್ಯಾಂಕ್ ಹಿರಿಯ ಅಧಿಕಾರಿಗಳ ದೂರಿನ ಅನ್ವಯ ಬ್ಯಾಂಕಿನ ಮೂವರು ಸೇರಿ ಐವರ ವಿರುದ್ಧ ಸಿಬಿಐ ಎಫ್ಐಆರ್ ದಾಖಲು ಮಾಡಿತ್ತು. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎಸ್‌ಐಟಿಗೆ ವಹಿಸಿತ್ತು.
ಎಸ್‌ಐಟಿ ಈಗಾಗಲೇ ಪ್ರಕರಣದ ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ವಾಲ್ಮಿಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆಯಾದ ಬಗ್ಗೆ ಈಗಾಗಲೇ ಜಾರಿ ನಿರ್ದೇಶನಾಲಯ ಸಹ ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ.