ಹೊಸ ವರ್ಷಾಚರಣೆಗಾಗಿ ಒಡಿಶಾದಿಂದ ತರಿಸಲಾಗಿದ್ದ 3.25 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ವಶಪಡಿಸಿಕೊಂಡಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ಮಹಿಳೆ ಸೇರಿದಂತೆ ಇಬ್ಬರು ವಿದೇಶೀ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.
ಸಿಸಿಬಿ ಪೊಲೀಸರು ಕೊಕೆನ್ ಮತ್ತು ಎಂಡಿಎಂಎ ಕ್ರಿಸ್ಟಲ್ ಮತ್ತು ಎಕ್ಸೆಟೆಸಿ ಪಿಲ್ಸ್ ಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿ 318 ಕೆಜಿ ತೂಕದ 3 ಕೋಟಿ ಮೌಲ್ಯದ ಮಾದಕವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ನವೆಂಬರ್ 20ರಂದು ಸೋಲದೇವನಹಳ್ಳಿ ಪುಟ್ಟಸ್ವಾಮಿ ಲೇಔಟ್ ನ ಶ್ರೀರಂಗ ನಿಲಯದಲ್ಲಿ ಬಾಡಿಗೆಗಿದ್ದ ಇಬ್ಬರು ವಿದೇಶಿ ಡ್ರಗ್ ಪೆಡ್ಲರ್ ನಿಷೇದಿತ ಮಾದಕವಸ್ತು ಕೊಕೆನ್ ಮತ್ತು ಎಂಡಿಎಂಎ ಕ್ರಿಸ್ಟಲ್ ಮತ್ತು ಎಕ್ಸೆಟೆಸಿ ಪಿಲ್ಸ್ ಗಳನ್ನು ಶೇಖರಿಸಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಂಡ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತ ವಿದೇಶಿ ಡ್ರಗ್ ಪೆಡ್ಲರ್ ಗಳಿಂದ 3 ಕೋಟಿ ಮೌಲ್ಯದ 1 ಕೆ.ಜಿ 520 ಗ್ರಾಂ ಎಂಡಿಎಂಎ ಕ್ರಿಸ್ಟಲ್, 202 ಗ್ರಾಂ ಕೊಕೆನ್, 12 ಗ್ರಾಂನ 23 ಎಂಡಿಎಂಎ ಎಕ್ಸೆಟೆಸಿ ಪಿಲ್ಸ್ ಗಳು,2 ಮೊಬೈಲ್ ಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಬಂಧಿತ ಆರೋಪಿಗಳ ಸುದೀರ್ಘ ವಿಚಾರಣೆ ನಡೆಸಿದಾಗ 5 ವರ್ಷಗಳ ಹಿಂದೆ ಮೆಡಿಕಲ್ ವೀಸಾ ಪಡೆದು ಭಾರತಕ್ಕೆ ಬಂದು ಮುಂಬೈ, ದೆಹಲಿಯಲ್ಲಿ ನೆಲೆಸಿರುವ ಆಫ್ರಿಕಾ ಮೂಲದ ಪರಿಚಯಸ್ಥ ವ್ಯಕ್ತಿಗಳಿಂದ ಕಡಿಮೆ ಬೆಲೆಗೆ ಎಂಡಿಎಂಎ ಕ್ರಿಸ್ಟಲ್, ಕೊಕೆನ್ ಮತ್ತು ಎಂಡಿಎಂಎ ಎಕ್ಸೆಟೆಸಿ ಫಿಲ್ಸ್ ಗಳನ್ನು ಖರೀದಿಸಿ, ಒಂದು ಗ್ರಾಂ ಗೆ 12 ಸಾವಿರದಿಂದ 15 ಸಾವಿರದಂತೆ ಹೆಚ್ಚಿನ ಬೆಲೆಗೆ ಕಾಲೇಜು ವಿದ್ಯಾರ್ಥಿಗಳಿಗೆ, ಐಟಿ/ಬಿಟಿ ಉದ್ಯೋಗಿಗಳಿಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿರುವುದನ್ನು ಬಾಯ್ಬಿಟ್ಟಿದ್ದಾರೆ ಎಂದರು.
ಆರೋಪಿಗಳಿಬ್ಬರ ಮೇಲೆ ಈಗಾಗಲೇ ಮುಂಬೈ ಮತ್ತು ಹೈದ್ರಾಬಾದ್ ನಗರಗಳಲ್ಲಿ ಎನ್ಡಿಪಿಎಸ್ ಪ್ರಕರಣಗಳು ದಾಖಲಾಗಿದ್ದು, ಆರೋಪಿಗಳು ಜಾಮೀನಿನ ಮೇಲೆ ಹೊರಗೆ ಬಂದಿರುವುದು ತನಿಖಾ ಕಾಲದಲ್ಲಿ ವಿಚಾರಣೆಯಿಂದ ತಿಳಿದು ಬಂದಿದೆ. ಆರೋಪಿಗಳ ವಿರುದ್ಧ ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.