ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಮೂರೂ ಕ್ಷೇತ್ರಗಳಲ್ಲೂ ಮುನ್ನಡೆ ಸಾಧಿಸುವ ಮೂಲಕ ಕ್ಲೀನ್ ಸ್ವೀಪ್ ನತ್ತ ದಾಪುಗಾಲಿರಿಸಿದೆ.
ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳಲ್ಲಿ ಆರಂಭಿಕ ಹಿನ್ನಡೆ ಅನುಭವಿಸಿದ್ದ ಕಾಂಗ್ರೆಸ್ ಪಕ್ಷ ಕೊನೆಯ ಹಂತದಲ್ಲಿ ಮುನ್ನಡೆ ಗಿಟ್ಟಿಸುವ ಮೂಲಕ ಗೆಲುವಿನತ್ತ ಹೆಜ್ಜೆ ಹಾಕಿದೆ. ಇದರಿಂದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ ಉಂಟಾಗಿದೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮಗನನ್ನೇ ಕಣಕ್ಕಿಳಿಸಿದ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಿನ್ನಡೆಗೆ ಒಳಗಾಗಿದ್ದಾರೆ. ನಿಖಿಲ್ ಕುಮಾರಸ್ವಾಮಿ ೧೨ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಾಗ 46 ಸಾವಿರ ಮತಗಳನ್ನು ಪಡೆದಿದ್ದು, ಪ್ರತಿಸ್ಪರ್ಧಿ ಕಾಂಗ್ರೆಸ್ ನ ಸಿಪಿ ಯೋಗೇಶ್ವರ್ ವಿರುದ್ಧ 22 ಸಾವಿರ ಮತಗಳಿಂದ ಹಿನ್ನಡೆ ಅನುಭವಿಸಿದ್ದು ಹ್ಯಾಟ್ರಿಕ್ ಸೋಲಿನ ಭೀತಿಗೆ ಸಿಲುಕಿದ್ದಾರೆ.
ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಅನ್ನಪೂರ್ಣ ತುಕಾರಾಂ ಪ್ರತಿಸ್ಪರ್ಧಿ ಬಿಜೆಪಿಯ ಬಂಗಾರು ಹನುಮಂತು ವಿರುದ್ಧ ೯ ಸಾವಿರ ಮತಗಳ ಮುನ್ನಡೆ ಪಡೆದಿದ್ದು ಗೆಲುವಿತ್ತನ ಹೆಜ್ಜೆ ಹಾಕಿದ್ದಾರೆ.
ಶಿಗ್ಗಾಂವಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ 10 ಸಾವಿರ ಮತಗಳಿಂದ ಹಿನ್ನಡೆ ಅನುಭವಿಸಿದ್ದು, ಕಾಂಗ್ರೆಸ್ ನ ಯಾಸಿರ್ ಅಹ್ಮದ್ 95 ಸಾವಿರ ಮತಗಳನ್ನು ಪಡೆಯುವ ಮೂಲಕ ಗೆಲುವಿನತ್ತ ಮುನ್ನಡೆದಿದ್ದಾರೆ.