ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ಸಿಗಲು ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳೇ ಕಾರಣ. ಸುಳ್ಳು, ಅಪಪ್ರಚಾರ ಮಾಡಿದವರಿಗೆ ಸೋಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ಜೊತೆಯಾದ ಬಿಜೆಪಿ ಮತ್ತು ಜೆಡಿಎಸ್ ಎರಡನ್ನೂ ಜನರು ಸೋಲಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮತ್ತು ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಫಲ ಸಿಕ್ಕಿದ ಗೆಲುವು ಎಂದರು.
ನಾನು ತಪ್ಪು ಮಾಡದೇ ಇದ್ದರೂ ಮುಡಾ ಕೇಸು ಸೇರಿದಂತೆ ಹಲವು ಪ್ರಕರಣಗಳಲ್ಲಿ ಸುಳ್ಳು ಹೇಳಿದರು. ಕಾಂಗ್ರೆಸ್ ಗ್ಯಾರಂಟಿ ಯೋಜನೆ ಜಾರಿಗೆ ತಂದಿಲ್ಲ, ನಿಲ್ಲಿಸಿಬಿಡುತ್ತಾರೆ ಎಂದೆಲ್ಲಾ ಸುಳ್ಳು ಅಪಪ್ರಚಾರ ಮಾಡಿದರು. ಅಲ್ಲದೇ ಎರಡೂ ಪಕ್ಷಗಳ ಕೋಮುವಾದ ಮತ್ತು ಸಿದ್ಧಾಂತವನ್ನು ಜನರು ಸ್ಪಷ್ಟವಾಗಿ ತಿರಸ್ಕರಿಸಿರುವುದಕ್ಕೆ ಇದು ಉದಾಹರಣೆ ಎಂದು ಅವರು ಹೇಳಿದರು.
ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಸಿಪಿ ಯೋಗೇಶ್ವರ್, ಯಾಸಿರ್ ಪಠಾಣ್ ಮತ್ತು ಅನ್ನಪೂರ್ಣ ತುಕರಾಮ್ ಅವರಿಗೆ ಅಭಿನಂದನೆಗಳು ಎಂದು ಸಿದ್ದರಾಮಯ್ಯ ಅಭಿನಂದಿಸಿದರು.
ನಾನು ದಂತಗೋಪುರದಲ್ಲಿ ಕೂತವನಲ್ಲ, ನಿರಂತರವಾಗಿ ಬಗ್ಗೆ ಜನರ ಜೊತೆ ಒಡನಾಟ ಇಟ್ಟುಕೊಂಡವನು, ನಮ್ಮ ಎಲ್ಲ ಗ್ಯಾರಂಟಿ ಯೋಜನಗಳ ಫಲಾನುಭವಿಗಳು ಖುಷಿಯಾಗಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಧ್ಯಮಗಳ ಮೂಲಕ ಗ್ಯಾರಂಟಿ ಯೋಝನೆಗಳ ಬಗ್ಗೆ ಅಪಪ್ರಚಾರ ಮಾಡುತ್ಗಿದ್ದರು. ಸಾಕ್ಷಾತ್ ಪ್ರಧಾನಿಯವರೇ ನಮ್ಮ ಗ್ಯಾರಂಟಿ ಯೋಜನೆಗಲ ಅನುಷ್ಟಾನದ ಬಗ್ಗೆ ಸುಳ್ಳು ಹೇಳಿದರು. ಮಹಾರಾಷ್ಟ್ರದಲ್ಲಿ ಸುಳ್ಳು ಜಾಹೀರಾತು ನೀಡಿದ್ದರು. ಇದಕ್ಕೆಲ್ಲದಕ್ಕೂ ಜನ ಉತ್ತರ ಕೊಟ್ಟಿದ್ದಾರೆ ಎಂದು ಅವರು ಹೇಳಿದರು.
ಮಾಜಿ ಪ್ರಧಾನಿ ದೇವೇಗೌಡರು ಮಾಡಿದ ಆರೋಪ ನನಗೆ ಬಹಳ ಬೇಸರ ಆಗಿದೆ. ನಾನು ಬಹಳ ವರ್ಷ ಅವರ ಜೊತೆಗೆ ಇದ್ದವನು. ಆದ್ರೂ ಕೂಡ, ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವುದೇ ನನ್ನ ಗುರಿ, ಸಿದ್ದರಾಮಯ್ಯ ಅಹಂಕಾರ, ಸೊಕ್ಕು ಮುರಿತೀನಿ ಅಂತೆಲ್ಲಾ ಮಾತಾಡಿದರು. ನಾನು ಮಂತ್ರಿ ಆಗಿ 40 ವರ್ಷ ಆಯ್ತು. ಎರಡು ಬಾರಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಆಗಿದ್ದೇನೆ. ಯಾವತ್ತೂ ಸೊಕ್ಕು, ಅಹಂಕಾರ ಮಾಡಿಲ್ಲ. ಜನ ಅವಕಾಶ ಕೊಟ್ಟಾಗ ಅಧಿಕಾರ ನಡೆಸಿದ್ದೇವೆ. ಸೋತಾಗ ಹೋರಾಟ ಮಾಡಿದ್ದೇವೆ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು.
ದೇವೇಗೌಡರು, ಕುಮಾರಸ್ವಾಮಿ ಅವ್ರು, ನಿಖಿಲ್ ಎಲ್ರೂ ಅಳೋದು. ಅಳೋದನ್ನು ರೂಢಿ ಮಾಡಿಕೊಂಡಿದ್ದಾರೆ. ಆದ್ರೂ ಜನ ನಮಗೆ ಮತ ಹಾಕಿದ್ದಾರೆ. ಬಿಜೆಪಿಯವರು ಮತದಾರರನ್ನು ಪೆದ್ದರು ಎಂದು ಭಾವಿಸುವುದನ್ನು ನಿಲ್ಲಿಸಬೇಕು. ಪ್ರತೀ ಬಾರಿ ಮತದಾರರನ್ನು ಬಕ್ರಾ ಮಾಡಿ ಗೆಲ್ತೀವಿ ಎನ್ನುವ ಬುದ್ದಿಯನ್ನು ಬಿಜೆಪಿಯವರು ಬಿಡಬೇಕು ಎಂದು ಅವರು ನುಡಿದರು.