ಕಾರು ಚಲಾಯಿಸುವಾಗ ಚಾಲಕ ನಿದ್ದೆಗೆ ಜಾರಿದ್ದರಿಂದ 5 ವೈದ್ಯರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾರಣ ಘಟನೆ ಉತ್ತರ ಪ್ರದೇಶದಲ್ಲಿ ಬುಧವಾರ ಮುಂಜಾನೆ ಸಂಭವಿಸಿದೆ.
ಉತ್ತರ ಪ್ರದೇಶದ ಸೈಫಾಯಿ ಮೆಡಿಕಲ್ ಕಾಲೇಜಿನಲ್ಲಿ ತರಬೇತಿ ಹಂತದಲ್ಲಿದ್ದ ೫ ಮಂದಿ ವೈದ್ಯರು ಮೃತಪಟ್ಟಿದ್ದಾರೆ.
ಲಕ್ನೋದಲ್ಲಿ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಎಸ್ ಯುವಿ ಸ್ಕಾರ್ಪಿಯೊ ಕಾರಿನಲ್ಲಿ ಮರಳುತ್ತಿದ್ದಾಗ ಆಗ್ರಾ-ಲಕ್ನೋ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲೇ 5 ವೈದ್ಯರು ಮೃತಪಟ್ಟಿದ್ದು, ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ.
ಕಾರು ಚಲಾಯಿಸುತ್ತಿದ್ದಾಗ ಚಾಲಕ ನಿದ್ದೆಗೆ ಜಾರಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ಅಪಘಾತವಾದ ಕೂಡಲೇ ವೈದ್ಯರನ್ನು ಆಸ್ಪತ್ರಗೆ ಸಾಗಿಸಲಾಯಿತಾದರೂ ದಾರಿಮಧ್ಯೆದಲ್ಲೇ ಅಸುನೀಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಒಬ್ಬನಿಗೆ ಚಿಕಿತ್ಸೆ ಮುಂದುವರಿದಿದೆ.
ಚಾಲಕ ನಿದ್ದೆಗೆ ಜಾರಿದ್ದರಿಂದ ನಿಯಂತ್ರಣ ತಪ್ಪಿದ ಕಾರು ಮತ್ತೊಂದು ಲೈನ್ ನಲ್ಲಿ ಚಲಿಸಲು ಆರಂಭಿಸಿದ್ದು, ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಮೃತಪಟ್ಟವರೆಲ್ಲರೂ ವೈದ್ಯರು ಹಾಗೂ ಆಸ್ಪತ್ರೆಯ ವೈದ್ಯಕೀಯ ಲ್ಯಾಬ್ ನಲ್ಲಿ ಕೆಲಸ ಮಾಡುವವರಾಗಿದ್ದು, ಮೃತರ ಕುಟುಂಬಗಳಿಗೆ ಹಾಗೂ ಕಾಲೇಜಿಗೆ ಮಾಹಿತಿ ನೀಡಲಾಗಿದೆ ಎಂದು ಸರ್ಕಲ್ ಇನ್ ಸ್ಪೆಕ್ಟರ್ ತಿಳಿಸಿದ್ದಾರೆ.