ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ ರೂಪಾ ಮಾನನಷ್ಟ ಹಾಗೂ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಮೂಲಕ ಮತ್ತೆ ಕಾನೂನು ಸಮರ ಆರಂಭಿಸಿದ್ದಾರೆ.
ರೋಹಿಣಿ ಸಿಂಧೂರಿ ತಮ್ಮ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸುವಂತೆ ಡಿ ರೂಪಾ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಆದರೆ ಅಧಿಕಾರಿಗಳು ಈ ರೀತಿ ಕಿತ್ತಾಡುವುದು ಸರಿಯಲ್ಲ. ಸಾರ್ವಜನಿಕರಿಗೆ ತಪ್ಪು ಮಾಹಿತಿ ರವಾನಿಸಿದಂತೆ ಆಗುತ್ತದೆ. ಆದ್ದರಿಂದ ರಾಜೀ ಮಾಡಿಕೊಳ್ಳುವಂತೆ ಸಲಹೆ ನೀಡಿತ್ತು.
ಸಾರ್ವಜನಿಕವಾಗಿ ಭೇಷರತ್ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಕೋರ್ಟ್ ನಲ್ಲಿಯೇ ಪ್ರಕರಣ ಇತ್ಯರ್ಥವಾಗಲಿ ಎಂದು ರೋಹಿಣಿ ಸಿಂಧೂರಿ ಪಟ್ಟು ಹಿಡಿದಿದ್ದರು. ಇದರಿಂದ ಅಸಮಾಧಾನಗೊಂಡ ಸುಪ್ರೀಂಕೋರ್ಟ್ ಪ್ರಕರಣವನ್ನು ಸ್ಥಳೀಯ ನ್ಯಾಯಾಲಯದಲ್ಲಿಯೇ ಬಗೆಹರಿಸಿಕೊಳ್ಳುವಂತೆ ಪ್ರಕರಣವನ್ನು ವಾಪಸ್ ಕಳುಹಿಸಿತ್ತು.
ಇದೀಗ ಡಿ. ರೂಪಾ ಬೆಂಗಳೂರಿನ 7ನೇ ಎಸಿಎಂಎಂ ನ್ಯಾಯಾಲಯದಲ್ಲಿ ರೋಹಿಣಿ ಸಿಂಧೂರಿ ವಿರುದ್ಧ ಮಾನನಷ್ಟ ಹಾಗೂ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಉತ್ತರ ನೀಡುವಂತೆ ರೋಹಿಣಿ ಸಿಂಧೂರಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.
2023 ಫೆ.19ರಂದು ರೋಹಿಣಿ ಸಿಂಧೂರಿ ತಮ್ಮ ವಿರುದ್ಧ ನೀಡಿದ ಮಾಧ್ಯಮ ಹೇಳಿಕೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಸುದ್ದಿಯನ್ನೇ ನಂತರ ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ಅನ್ನು 1.8 ಲಕ್ಷ ಜನರು ವೀಕ್ಷಿಸಿದ್ದಾರೆ ಎಂದು ರೂಪಾ ದೂರಿನಲ್ಲಿ ವಿವರಿಸಿದ್ದಾರೆ.
ರೋಹಿಣಿ ಸಿಂಧೂರಿ ಅವರ ಹೇಳಿಕೆ ನಂತರ ಸರ್ಕಾರ ನನ್ನನ್ನು ಜಾಗ ತೋರಿಸದೇ ವರ್ಗಾವಣೆ ಮಾಡಿತ್ತು. 6 ತಿಂಗಳು ವೇತನ ಹಾಗೂ ಜಾಗ ಇಲ್ಲದೇ ನೊಂದಿದ್ದೇನೆ. ಅಲ್ಲದೇ ಈ ಘಟನೆಯಿಂದ ಪತಿ ಹಾಗೂ ಮಕ್ಕಳು ಕೂಡ ಯಾತನೆ ಅನುಭವಿಸಿದ್ದಾರೆ ಎಂದು ಅವರು ವಿವರಿಸಿದ್ದಾರೆ.