ವಿಲ್ ಜಾಕ್ಸ್ ಅಜೇಯ ಶತಕ ಹಾಗೂ ವಿರಾಟ್ ಕೊಹ್ಲಿ ಅವರ ಜವಾಬ್ದಾರಿಯುತ ಪ್ರದರ್ಶನದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ವಿಕೆಟ್ ಗಳ ಭಾರೀ ಅಂತರದಿಂದ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಆಸೆ ಜೀವಂತವಾಗಿರಿಸಿಕೊಂಡಿದೆ.
ಅಹಮದಾಬಾದ್ ನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 200 ರನ್ ಕಲೆಹಾಕಿತು. ಬೃಹತ್ ಮೊತ್ತ ಬೆಂಬತ್ತಿದ ಆರ್ ಸಿಬಿ 16 ಓವರ್ ಗಳಲ್ಲಿ 1 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.
ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸುವ ಜವಾಬ್ದಾರಿ ನಿಭಾಯಿಸುತ್ತಿದ್ದರು. ಆದರೆ ಪಂದ್ಯದ ಆಕರ್ಷಣೆ ಆಗಿದ್ದು, ವಿಲ್ ಜಾಕ್ಸ್. ಟೂರ್ನಿಯಲ್ಲಿ ನಿರೀಕ್ಷಿತ ಪ್ರದರ್ಶನ ಪ್ರದರ್ಶನ ನೀಡದ ವಿಲ್ ಜಾಕ್ಸ್ ಸಿಡಿಲಬ್ಬರದ ಬ್ಯಾಟಿಂಗ್ ನಿಂದ ಪಂದ್ಯದ ಚಿತ್ರಣವನ್ನೇ ಬದಲಿಸಿದರು. ಅದರಲ್ಲೂ ಕೊನೆಯ 2 ಓವರ್ ಗಳಲ್ಲಿ 57 ರನ್ ದೋಚುವ ಮೂಲಕ ಶತಕ ಗಳಿಸಿದರು.
ಜಾಕ್ಸ್ 41 ಎಸೆತಗಳಲ್ಲಿ 5 ಬೌಂಡರಿ ಮತ್ತು 10 ಸಿಕ್ಸರ್ ಸಿಡಿಸಿ ಬರೋಬ್ಬರಿ ಶತಕ ಗಳಿಸಿ ಮಿಂಚು ಹರಿಸಿದರೆ, ವಿರಾಟ್ ಕೊಹ್ಲಿ 44 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್ ಸಹಾಯದಿಂದ 70 ರನ್ ಬಾರಿಸಿ ಔಟಾಗದೇ ಉಳಿದರು.
ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ ಸಾಯಿ ಸುದರ್ಶನ್ ಮತ್ತು ಶಾರೂಖ್ ಖಾನ್ ಅವರ ಅರ್ಧಶತಕಗಳ ನೆರವಿನಿಂದ ಬೃಹತ್ ಮೊತ್ತ ದಾಖಲಿಸಿತು.
ಸಾಯಿ ಸುದರ್ಶನ್ 49 ಎಸೆತಗಳಲ್ಲಿ 8 ಬೌಂಡರಿ ಮತ್ತು 4 ಸಿಕ್ಸರ್ ಸಹಾಯದಿಂದ 84 ರನ್ ಸಿಡಿಸಿದರೆ, ಶಾರೂಖ್ ಖಾನ್ 30 ಎಸೆತಗಳಲ್ಲಿ 3 ಬೌಂಡರಿ ಮತ್ತು 5 ಸಿಕ್ಸರ್ ಒಳಗೊಂಡ 58 ರನ್ ಚಚ್ಚಿದರು. ಇವರಿಬ್ಬರು ಮೂರನೇ ವಿಕೆಟ್ ಗೆ 104 ರನ್ ಜೊತೆಯಾಟದಿಂದ ತಂಡವನ್ನು ಮುನ್ನಡೆಸಿದರು.