ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ ವಿ. ಶ್ರೀನಿವಾಸ ಪ್ರಸಾದ್ ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಉಸಿರಾಟ ಸಮಸ್ಯೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀನಿವಾಸ್ ಪ್ರಸಾದ್ ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮುಂಜಾನೆ 1.27ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಸ್ವಾಭಿಮಾನಕ್ಕೆ ಹೆಸರಾಗಿದ್ದ 76 ವರ್ಷದ ಶ್ರೀನಿವಾಸ ಪ್ರಸಾದ್ ರಾಜಕೀಯದಿಂದ ನಿವೃತ್ತಿ ಪಡೆದಿದ್ದರು. ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಗ್ರಾಹಕ ಸೇವೆಗಳ ಸಚಿವರಾಗಿ ಸೇವೆ ಸಲ್ಲಿಸಿದ್ದ ಶ್ರೀನಿವಾಸ್ ಪ್ರಸಾದ್ 2013 ರಿಂದ 2016 ರವರೆಗೆ ಸಿದ್ದರಾಮಯ್ಯ ಸರ್ಕಾರದ ಕಾಂಗ್ರೆಸ್ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಖಾತೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ಈವರೆಗೆ 6 ಬಾರಿ ಲೋಕಸಭಾ ಚುನಾವಣೆ ಸೇರಿದಂತೆ ಒಟ್ಟು 14 ಚುನಾವಣೆಗಳಲ್ಲಿ ಸ್ಪರ್ಧಿಸಿ 11 ಬಾರಿ ಜಯಗಳಿಸಿದ್ದಾರೆ. ಇತ್ತೀಚೆಗಷ್ಟೇ ಅನಾರೋಗ್ಯಕ್ಕೆ ಒಳಗಾಗುವ ಮುನ್ನ ದೂರವಾಗಿದ್ದ ಸ್ನೇಹಿತರಾಗಿದ್ದ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು. ನಂತರ ಬಿಎಸ್ ಯಡಿಯೂರಪ್ಪ ಕೂಡ ಭೇಟಿ ಮಾಡಿ ರಾಜಕೀಯ ಕುರಿತು ಚರ್ಚೆ ಮಾಡಿದ್ದರು.
ಸೋಮವಾರ ರಾತ್ರಿ ಕಾಫಿ ಬೇಕು ಅಂತ ಚೀಟಿ ಬರೆದುಕೊಟ್ಟಿದ್ದ ಶ್ರೀನಿವಾಸ್ ಪ್ರಸಾದ್ ಎರಡು ಗುಟುಕು ಕಾಫಿ ಕುಡಿದ ನಂತರ ಉಸಿರು ನಿಲ್ಲಿಸಿದ್ದಾರೆ. ಸೋಮವಾರ ಸಂಜೆ ಚಾಮರಾಜನಗರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ.