ಕನ್ನಡ ಚಿತ್ರರಂಗದ ಹಿರಿಯ ನಟ, ರಂಗ ಕಲಾವಿದ ಸರಿಗಮ ವಿಜಿ ಬುಧವಾರ ಬೆಳಿಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಉಸಿರು ನಿಲ್ಲಿಸಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.
ಕಳೆದ ಕೆಲವು ದಿನಗಳಿಂದ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಸರಿಗಮ ವಿಜಿ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಂಕ್ರಾಂತಿ ಮಾರನೇ ದಿನವಾದ ಬುಧವಾರ 9.45ಕ್ಕೆ ಮೃತಪಟ್ಟಿದ್ದಾರೆ.
269ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟನೆ, ೮೦ಕ್ಕೂ ಹೆಚ್ಚು ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಸರಿಗಮ ವಿಜಿ, ಕನ್ನಡದ ಕಿರುತೆರೆಯಲ್ಲೂ ಸಾಕಷ್ಟು ಧಾರವಾಹಿಗಳಲ್ಲಿ ಕಾಣಿಸಿಕೊಂಡಿದ್ದರು. ಅವರದ್ದೇ ನಿರ್ದೇಶನದ ಸರಿಗಮದಲ್ಲಿ ಸಂಸಾರ ನಾಟಕದ ಜನಪ್ರಿಯತೆಯಿಂದ ಸರಿಗಮ ವಿಜಿ ಎಂದೇ ಖ್ಯಾತರಾಗಿದ್ದು, ಈ ನಾಟಕ ಸಾವಿರಕ್ಕೂ ಅಧಿಕ ಪ್ರದರ್ಶನ ಕಾಣುವ ಮೂಲಕ ದಾಖಲೆ ಬರೆದಿತ್ತು.
ಸರಿಗಮ ವಿಜಿ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿರುವ ಮನೆಯಲ್ಲಿ ನಾಳೆ ಬೆಳಿಗ್ಗೆ ವರೆಗೂ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಿಗ್ಗೆ 10 ಗಂಟೆಯಿಂದ 12 ಗಂಟೆಯೊಳಗೆ ಚಾಮರಾಜಪೇಟೆಯ ಟಿಆರ್ ಮಿಲ್ ಬಳಿಯ ಚಿತಾಗಾರಾದಲ್ಲಿ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಬೆಳುವಲದ ಮಡಿಲಲ್ಲಿ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶ ಮಾಡಿದ ಸರಿಗಮ ವಿಜಿ ಡಕೋಟಾ ಪಿಕ್ಚರ್ ನಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು.