Wednesday, December 24, 2025
Google search engine
Homeರಾಜ್ಯದೆಹಲಿ ಗಣರಾಜ್ಯೋತ್ಸವದಲ್ಲಿ ಕಲ್ಲಿನಲ್ಲಿ ಅರಳಿದ ಶಿಲ್ಪಕಲೆಯ ಲಕ್ಕುಂಡಿ ಅನಾವರಣ!

ದೆಹಲಿ ಗಣರಾಜ್ಯೋತ್ಸವದಲ್ಲಿ ಕಲ್ಲಿನಲ್ಲಿ ಅರಳಿದ ಶಿಲ್ಪಕಲೆಯ ಲಕ್ಕುಂಡಿ ಅನಾವರಣ!

ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ. ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್‌ಪಥ್) ಇದೇ ಜ. 26 ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಲಿದೆ.

ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ. ನಮ್ಮ ರಾಜ್ಯವು ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲನ್ನು ಸ್ಥಾಪಿಸುತ್ತಲೇ ಸಾಗಿದೆ. ಈ ಬಾರಿ ಲಕ್ಕುಂಡಿಯ ಶಿಲ್ಪಕಲೆಯಿಂದ ಕೂಡಿರುವ ಐತಿಹಾಸಿಕ ದೇವಾಲಯಗಳು ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಲು ಹೊರಟಿದೆ ಎಂದು ಇಂದು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಇಲಾಖೆಯ ಆಯುಕ್ತರಾದ ಹೇಮಂತ್‌ ಎಂ ನಿಂಬಾಳ್ಕರ್‌, ಐಪಿಎಸ್‌ ಅವರು ನುಡಿದರು.

ಕರ್ನಾಟಕಕ್ಕೆ ಈ ಬಾರಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರವು ಅತ್ಯಂತ ಸ್ಮರಣೀಯವಾದುದು. ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣುವ ನಮ್ಮ ರಾಜ್ಯದಲ್ಲಿ ಎಲ್ಲಾ ಧರ್ಮಗಳ ದೇವಾಲಯಗಳಿವೆ. ಈ ಪೈಕಿ ಐತಿಹಾಸಿಕ ಪಟ್ಟಣವಾದ ಗದಗದ ಲಕ್ಕುಂಡಿಯು ಒಂದಾಗಿದೆ. ಅಹಿಂಸಾವಾದಿಯ ನೆಲೆಬೀಡು. ಶಿಲ್ಪಕಲೆಯ ತೊಟ್ಟಿಲಾದ ಲಕ್ಕುಂಡಿಯಲ್ಲಿ ಶೈವ, ಜೈನ ಮತ್ತು ವೈಷ್ಣವ ದೇವಾಲಯಗಳಿವೆ. ಕಲಾತ್ಮಕತೆಯಿಂದ ಕಂಗೊಳಿಸುವ ಇಲ್ಲಿನ ದೇವಾಲಯಗಳು ಈ ಬಾರಿಯ ಸ್ತಬ್ಧಚಿತ್ರದಲ್ಲಿ ಅವುಗಳ ಪಡಿಯಚ್ಚಿನಂತೆ ಮೂಡಿಬಂದಿವೆ. ಜೊತೆಗೆ, ದೇವಾಲಯವೇ ಮರುಜೀವ ತಳೆದಂತಿದೆ. ರಾಜ್ಯವು ಪ್ರಸ್ತುತ ಪಡಿಸುತ್ತಿರುವ ಈ ಸ್ತಬ್ಧಚಿತ್ರವು ಇದೇ ಜನವರಿ 26 ರಂದು ಎಲ್ಲರ ಮನಸೂರೆಗೊಳ್ಳಲಿದೆ ಎನ್ನುವ ವಿಶ್ವಾಸ ಹೊಂದಿರುವುದಾಗಿ ವಾರ್ತಾ ಇಲಾಖೆಯ ಆಯುಕ್ತರು ತಿಳಿಸಿದರು.

ದೆಹಲಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರದ ವಿಷಯದ ಆಯ್ಕೆ, ವಿನ್ಯಾಸ, ಕೇಂದ್ರ ಸರ್ಕಾರ ರಕ್ಷಣಾ ಇಲಾಖೆಯಲ್ಲಿ ಅದರ ಅನುಮೋದನೆ, ನಿರ್ಮಾಣ, ಪಾಲ್ಗೊಳ್ಳುವಿಕೆ ಹೀಗೆ ಎಲ್ಲಾ ಹಂತಗಳಲ್ಲೂ ‘ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯೇ ಸಕ್ರಿಯವಾಗಿ ಪಾಲ್ಗೊಳ್ಳುತ್ತದೆ. ಅಲ್ಲದೆ, ಇಲಾಖೆಯು ಕಳೆದ 15 ವರ್ಷಗಳಿಂದ ನಿರಂತರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಪ್ರದರ್ಶನದಲ್ಲಿ ಪಾಲ್ಗೊಳ್ಳುತ್ತಿದೆ. ಇದು ಕನ್ನಡಿಗರೆಲ್ಲರೂ ಹೆಮ್ಮೆ ಪಡುವ ಸಂಗತಿ ಎಂದು ಆಯುಕ್ತರಾದ ಹೇಮಂತ್‌ ಎಂ ನಿಂಬಾಳ್ಕರ್‌, ಅವರು ತಮ್ಮ ಸಂತಸವನ್ನು ಹಂಚಿಕೊಂಡರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments