ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮನೆಯಲ್ಲಿ ಪುತ್ರ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್ ಐಟಿ ಪೊಲೀಸರು ಬಂಧಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಅವರಿಂದ ದೌರ್ಜನ್ಯಕ್ಕೆ ಒಳಗಾದ ಮನೆ ಕೆಲಸದ ಮಹಿಳೆಯನ್ನು ಅಪಹರಿಸಿದ ಪ್ರಕರಣದಲ್ಲಿ ಎಸ್ ಐಟಿ ಭಾನುವಾರ ಸಂಜೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ಮನೆಯಲ್ಲಿ ಬಂಧಿಸಲಾಗಿದೆ.
ರೇವಣ್ಣ ಬಂಧನದಿಂದ ತಪ್ಪಿಸಿಕೊಳ್ಳಲು ಜಾಮೀನಿಗಾಗಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಜಾಮೀನು ನಿರಾಕರಣೆ ಬೆನ್ನಲ್ಲೇ ಎಸ್ ಐಟಿ ಪೊಲೀಸರು ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಕಳೆದೆರಡು ದಿನಗಳಿಂದ ರೇವಣ್ಣ ದೇವೇಗೌಡರ ನಿವಾಸದಲ್ಲಿ ಇದ್ದರು ಎಂದು ಮೂಲಗಳು ತಿಳಿಸಿವೆ.
ದೇವೇಗೌಡರ ಮನೆಗೆ ಎಸ್ ಐಟಿ ಪೊಲೀಸರು ಆಗಮಿಸಿದ ಅರ್ಧ ಗಂಟೆ ನಂತರ ರೇವಣ್ಣ ಮನೆಯಿಂದ ಹೊರಗೆ ಬಂದಾಗ ಅವರನ್ನು ವಶಕ್ಕೆ ಪಡೆಯಲಾಯಿತು. ನಂತರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ನಡೆಯಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.