ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೆಯ ಸರ್ವೀಸ್ ರಸ್ತೆಯಲ್ಲಿ ಕ್ಯಾಂಟರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮಹಿಳೆಯರು ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಸಂಭವಿಸಿದೆ.
ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಗುರುವಾರ ಬೆಳಿಗ್ಗೆ 11 ಗಂಟೆಗೆ ದುರಂತ ಸಂಭವಿಸಿದ್ದು. ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಗ್ರಾಮದ ಶಿವಪ್ರಕಾಶ್, ಪುಟ್ಟಗೌರಮ್ಮ, ಶಿವರತ್ನ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕ್ಯಾಂಟರ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



