ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಎಂಬಾತನನ್ನು ದುಷ್ಕರ್ಮಿಗಳು ಹಾಡುಹಗಲೇ ಬರ್ಬರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈತ ಹಿಂದೂ ಕಾರ್ಯಕರ್ತ ಎಂದು ಹೇಳಲಾಗುತ್ತಿದ್ದರೆ, ಮತ್ತೊಂದೆಡೆ ಪೊಲೀಸರ ದಾಖಲೆಗಳ ಪ್ರಕಾರ ಕೊಲೆ ಆರೋಪಿಯಾರಿಗುವ ರೌಡಿ ಶೀಟರ್!
ಮಂಗಳೂರಿನ ಬಜ್ಪೆ ಕಿನ್ನಿಪದವು ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಸುಹಾಸ್ ಶೆಟ್ಟಿ ಕೊನೆ ಬೆನ್ನಲ್ಲೇ ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಮೇ 6ರವರೆಗೆ ನಿಷೇದಾಜ್ಞೆ ಜಾರಿಗೊಳಿಸಿದ್ದಾರೆ.
ಕೊಲೆಯಾಗಿರುವ ಸುಹಾಸ್ ಶೆಟ್ಟಿ ಭಜರಂಗದಲ್ಲಿ ಗುರುತಿಸಿಕೊಂಡಿದ್ದು, ಹಿಂದೂ ಕಾರ್ಯಕರ್ತ ಎಂದು ಮಾಧ್ಯಮಗಳು ಬಿಂಬಿಸುತ್ತಿವೆ. ಆದರೆ ಕೊಲೆಯಾದ ಸುಹಾಸ್ ಶೆಟ್ಟಿ ರೌಡಿಶೀಟರ್ ಎಂದು ಪೊಲೀಸರು ತಿಳಿಸಿದ್ದಾರೆ. ಈತ ಸುರತ್ಕಲ್ ಮುಹಮ್ಮದ್ ಫಾಝಿಲ್ ಕೊಲೆ ಸೇರಿದಂತೆ ಹಲವು ಕ್ರಿಮಿನಲ್ ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂದು ತಿಳಿಸಿದ್ದಾರೆ.
ನಿಷೇದಾಜ್ಞೆ ಜಾರಿ
ಸುಹಾಸ್ ಶೆಟ್ಟಿ ಕೊಲೆ ಹಿನ್ನೆಲೆಯಲ್ಲಿ ನಗರದಲ್ಲಿ ಮೇ 6 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿಷೇದಾಜ್ಞೆ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲು ಅವಕಾಶ ಇರುವುದಿಲ್ಲ. ಅಲ್ಲದೇ 5ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಒಂದೆಡೆ ಸೇರುವಂತಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.
ದ.ಕ. ಜಿಲ್ಲಾ ಬಂದ್‌ಗೆ ವಿಶ್ವ ಹಿಂದೂ ಪರಿಷತ್ ನೀಡಿದ ಕರೆಯಂತೆ ನಗರದಲ್ಲಿ ಖಾಸಗಿ ಬಸ್‌ಗಳು ಸಂಚಾರ ಸ್ಥಗಿತಗೊಳಿಸಿವೆ. ಅಂಗಡಿ ಮುಂಗಟ್ಟು ಬಹುತೇಕ ಮುಚ್ಚಲಾಗಿದೆ. ಬೆಳಿಗ್ಗೆ ಕೆಲ ಅಂಗಡಿ, ಹೋಟೆಲ್ ಗಳು ತೆರೆದಿದ್ದವು, ಅವುಗಳನ್ನು ಕೂಡ ಬಂದ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಕಮಿಷನರ್ ಅಗ್ರವಾಲ್ ಅವರು ಆದೇಶ ಹೊರಡಿಸಿದ್ದಾರೆ. ಕೆಲವು ಖಾಸಗಿ ವಾಹನಗಳು ಸಂಚಾರ ಮಾಡುತ್ತಿವೆ ಆದರೂ, ಬಸ್‌ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿವೆ. ಬಹುತೇಕ ಬಂದ್ ವಾತಾವರಣ ನಿರ್ಮಾಣ ಆಗಿದೆ.
ನಗರ ಸೇರಿದಂತೆ ಎಲ್ಲ ಕಡೆಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಹೆಚ್ಚಿಸಲಾಗಿದ್ದು, ಪೊಲೀಸ್ ಅಧಿಕಾರಿಗಳು ಘಟನೆ ಕುರಿತು ಹದ್ದಿನ ಕಣ್ಣು ಇಟ್ಟಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆರ್. ಹಿತೇಂದ್ರ ಅವರು ಮಂಗಳೂರಿಗೆ ಆಗಮಿಸಿದ್ದಾರೆ. ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಅಲ್ಲಲ್ಲಿ ಬಸ್‌ಗಳಿಗೆ ಕಲ್ಲು ತೂರಾಟ ನಡೆಸಲಾಗಿದ್ದು, ಪ್ರಯಾಣಿಕರು ಪರದಾಟ ನಡೆಸಬೇಕಾದ ಸ್ಥಿತಿ ನಿರ್ಮಾಣ ಆಗಿದೆ.
ಸುಹಾಸ್ ಶೆಟ್ಟಿ ಕೊಲೆ ಎರಡು ಗುಂಪುಗಳ ನಡುವೆ ವೈಷಮ್ಯದ ಹಿನ್ನೆಲೆಯಲ್ಲಿ ನಡೆದಿದ್ದು, ಸುಹಾಸ್ ಶೆಟ್ಟಿ ಕೊಲೆ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಫಿನಿಷ್ ಎಂದು ಪೋಸ್ಟರ್ ಹಾಕಲಾಗಿದ್ದು,ಇದು ಕೂಡ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.


