Tuesday, June 30, 2026
Google search engine
Homeರಾಜ್ಯಕೃಷ್ಣ ಜಲವಿವಾದ: ಸರ್ವಪಕ್ಷ ಸಭೆ ಕರೆಯಲು ರಾಜ್ಯ ಸರ್ಕಾರ ತೀರ್ಮಾನ

ಕೃಷ್ಣ ಜಲವಿವಾದ: ಸರ್ವಪಕ್ಷ ಸಭೆ ಕರೆಯಲು ರಾಜ್ಯ ಸರ್ಕಾರ ತೀರ್ಮಾನ

ಬೆಂಗಳೂರು: ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಧ್ಯದಲ್ಲಿಯೇ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೃಷ್ಣಾ ನ್ಯಾಯಾಧೀಕರಣ-2 ಗಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ರಾಜ್ಯದ ಪಾಲಿನ ನೀರನ್ನು ಪಡೆದುಕೊಳ್ಳಲು ಕಾನೂನು ಕ್ರಮಗಳು ಸೇರಿದಂತೆ ಎಲ್ಲಾ ಪ್ರಯತ್ನ ನಡೆಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದರು.

ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಗಜೆಟ್ ಅಧಿಸೂಚನೆ ಪ್ರಕಟಿಸಲು ಮತ್ತು ಈ ಕುರಿತು ಸೆಪ್ಟೆಂಬರ್ 16, 2011ರ ಸುಪ್ರೀಂಕೋರ್ಟ್ ಆದೇಶವನ್ನು ಮಾರ್ಪಡಿಸಲು ಕೋರಿ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಲು ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಲು ನಿರ್ಧರಿಸಲಾಯಿತು.

ನ್ಯಾಯಾಧೀಕರಣದ ಅಂತಿಮ ತೀರ್ಪು ಕೇಂದ್ರ ಸರ್ಕಾರದ ಗಜೆಟ್ ಅಧಿಸೂಚನೆಗೆ ಒಳಪಟ್ಟಿದ್ದು, ಈ ಕುರಿತಾಗಿ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಇನ್ನೂ ಅಧಿಸೂಚನೆ ಆಗಿರುವುದಿಲ್ಲ. ನ್ಯಾಯಾಧೀಕರಣದ ಅಂತಿಮ ತೀರ್ಪು ನೀಡಿದ ದಿನಾಂಕದಿಂದ ಇದುವರೆಗೂ 15 ವರ್ಷಗಳೇ ಕಳೆದಿವೆ. ಉತ್ತರ ಕರ್ನಾಟಕದ ಯುಕೆಪಿ-3 ಯೋಜನೆಯ ಪ್ರದೇಶದಲ್ಲಿನ ರೈತರು ತಮ್ಮ ಹಕ್ಕಿನ ಪಾಲನ್ನು ಬಳಸಲು ಬಹಳ ವರ್ಷಗಳಿಂದ ಕಾಯುತ್ತಿದ್ದಾರೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.

ಕಾವೇರಿ ಜಲವಿವಾದ ನ್ಯಾಯಮಂಡಳಿ ತೀರ್ಪಿಗೆ ಸಂಬಂಧಿಸಿದಂತೆ ಸಿವಿಲ್ ಮೇಲ್ಮನವಿಗಳು ಬಾಕಿ ಇರುವಾಗಲೂ ಕಾವೇರಿ ನ್ಯಾಯಾಧೀಕರಣದ ತೀರ್ಪು ಪ್ರಕಟಿಸಲು ಸುಪ್ರೀಂಕೋರ್ಟ್ ನಿರ್ದೇಶಿಸಿರುತ್ತದೆ. ಇದೇ ರೀತಿ ಮಹದಾಯಿ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಪ್ರಕಟಣೆಗೆ ಸುಪ್ರೀಂಕೋರ್ಟ್ ದಿನಾಂಕ 20-02-2020ರ ತನ್ನ ಆದೇಶದಲ್ಲಿ ನಿರ್ದೇಶಿಸಿದೆ. ಅದರಂತೆ ಈ ಎರಡೂ ನ್ಯಾಯಾಧೀಕರಣಗಳ ತೀರ್ಪನ್ನು ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿರುತ್ತದೆ. ಇದೇ ರೀತಿಯಲ್ಲಿ ಕೃಷ್ಣಾ ನ್ಯಾಯಾಧೀಕರಣದ ತೀರ್ಪಿನ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ನಿರ್ಧರಿಸಲಾಯಿತು.

ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ-II ದಿನಾಂಕ 30-12-2010 ರಂದು ಕೃಷ್ಣಾ ನ್ಯಾಯಾಧೀಕರಣ-2 ರ ತೀರ್ಪು ನೀಡಿದ್ದು, ದಿನಾಂಕ 29-11-2013ರಂದು further report ನೀಡಿರುತ್ತದೆ. ನ್ಯಾಯಾಧೀಕರಣದ ಅಂತಿಮ ತೀರ್ಪಿನಡಿ ಕರ್ನಾಟಕ ರಾಜ್ಯಕ್ಕೆ 173 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿರುತ್ತದೆ. ಈ ಪೈಕಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಯೋಜನೆಗೆ 130 ಟಿಎಂಸಿ ಹಂಚಿಕೆ ನಿಗದಿಪಡಿಸಿರುತ್ತದೆ.

ಆದರೆ ನ್ಯಾಯಮಂಡಳಿಯ ವರದಿ ಮತ್ತು ನ್ಯಾಯಾಧೀಕರಣದ ಅಂತಿಮ ಆದೇಶ ಪ್ರಶ್ನಿಸಿ ಆಂಧ್ರಪ್ರದೇಶ ಸುಪ್ರೀಂಕೋರ್ಟ್ನಲ್ಲಿ ಎಸ್ಎಲ್ಪಿ ದಾಖಲಿಸಿದೆ. ಈ ಕುರಿತು ಸುಪ್ರೀಂಕೋರ್ಟ್ ತನ್ನ ದಿನಾಂಕ 16-09-2011 ರ ಆದೇಶದಲ್ಲಿ ʻʻತನ್ನ ಮುಂದಿನ ಆದೇಶದವರೆಗೆ ನ್ಯಾಯಾಧೀಕರಣ ತೆಗೆದುಕೊಳ್ಳಬಹುದಾದ ಯಾವುದೇ ನಿರ್ಧಾರಗಳ ಅಧಿಸೂಚನೆ ಪ್ರಕಟಿಸದಂತೆ ಆದೇಶ ನೀಡಿತ್ತು.ʼʼ

ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಆರ್.ಬಿ.ತಿಮ್ಮಾಪುರ್, ಶರಣಬಸಪ್ಪ ಗೌಡ ದರ್ಶನಾಪುರ, ಮಹಾದೇವಪ್ಪ, ಶಿವಾನಂದ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ನ್ಯಾಯವಾದಿ ಮೋಹನ್ ಕಾತರ್ಕಿ ಮತ್ತಿತರರು ಉಪಸ್ಥಿತರಿದ್ದರು.

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments