ಮೇ 20ರಂದು ವಿಜಯನಗರದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ 2 ವರ್ಷ ಪೂರೈಸಿದ ಸಂಭ್ರಮಾಚರಣೆ ನಡೆಯಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಎರಡನೇ ವರ್ಷಾಚರಣೆ ಸಂಭ್ರಮವನ್ನು ಮುಂದೂಡಲು ಆಲೋಚನೆ ಮಾಡಿದ್ದೆವು. ಆದರೆ ಈಗ ಕದನ ವಿರಾಮ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಿದ್ದೇವೆ ಎಂದರು.
ಐದಾರು ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರು ಹಾಗೂ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಕಾರ್ಯಕರ್ತರು ಹಾಗೂ ಅಧಿಕಾರಿಗಳ ಸಭೆ ಮಾಡಲು ತಿಳಿಸಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕದನ ವಿರಾಮ ಬೆನ್ನಲ್ಲೇ ಇಂದಿರಾ ಗಾಂಧಿ ಅವರ ಹೇಳಿಕೆ ವೈರಲ್ ಆಗುತ್ತಿದ್ದು ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಲಾಗುತ್ತಿದೆ ಎಂದು ಕೇಳಿದಾಗ, ನಾನು ಈ ವಿಚಾರವಾಗಿ ಚರ್ಚೆ ಮಾಡುವುದಿಲ್ಲ. ನಮ್ಮ ರಾಷ್ಟ್ರೀಯ ನಾಯಕರು ಈ ಬಗ್ಗೆ ಪಕ್ಷದ ನಿಲುವು ತಿಳಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಚರ್ಚೆ ಬಂದಾಗ ಮಾತನಾಡುತ್ತೇನೆ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆಯುತ್ತಿದ್ದು, ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯಂತೆ 1 ಲಕ್ಷ ಪಟ್ಟಾ ಖಾತೆ ಹಂಚಿಕೆ ಮಾಡಲಾಗುತ್ತಿದೆ. ಇದು ಕೇವಲ ಸರ್ಕಾರದ ಸಂಭ್ರಮಾಚರಣೆ ಮಾತ್ರವಲ್ಲ. ಇಡೀ ರಾಜ್ಯದ ಜನ ಸಂಭ್ರಮಿಸುವ ಕ್ಷಣ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ಕಂದಾಯ ಇಲಾಖೆಯಿಂದ 1 ಲಕ್ಷ ಪಟ್ಟಾ ಖಾತೆಗಳನ್ನು ನೀಡಬೇಕು ಎಂದು ತೀರ್ಮಾನಿಸಲಾಗಿದೆ. ಇದು ನಮ್ಮ ಪ್ರಣಾಳಿಕೆಯ ಭಾಗವಾಗಿತ್ತು. ಅದನ್ನು ಮಾಡುತ್ತಿದ್ದೇವೆ. ಈ ಕಾರ್ಯಕ್ರಮಕ್ಕೆ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸುತ್ತೇವೆ ಎಂದು ಹೇಳಿದರು.


