ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಆಂಧ್ರ ಸಾರಿಗೆ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದ ಹೊಸಕೋಟೆಯಲ್ಲಿ ಸಂಭವಿಸಿದೆ.
ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಅಪಘಾತದಲ್ಲಿ ಬಸ್ನಲ್ಲಿದ್ದ ಆಂಧ್ರಪ್ರದೇಶದ ಚಿತ್ತೂರು ಸಮೀಪದ ನೆಲ್ಲೂರು ನಿವಾಸಿಗಳಾದ ಕೇಶವರೆಡ್ಡಿ (44), ತುಳಸಿ (21), ಪ್ರಣತಿ (4) ಹಾಗೂ 1 ವರ್ಷದ ಮಗು ಮೃತಪಟ್ಟಿದ್ದಾರೆ. 16 ಪ್ರಯಾಣಿಕರು ಗಾಯಗೊಂಡಿದ್ದು, 8 ಮಂದಿಯ ಸ್ಥಿತಿ ಗಂಭೀರವಾಗಿದೆ.
ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಆಂಧ್ರ ಸಾರಿಗೆ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ ಚಾಲಕ ಓವರ್ ಟೇಕ್ ಮಾಡುವ ಆತುರದಲ್ಲಿ ನಿಯಂತ್ರಣ ಕಳೆದುಕೊಂಡು ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಹೇಳಲಾಗಿದೆ.
ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕಾರಣ ಕೋಲಾರ ಹೆದ್ದಾರಿಯಲ್ಲಿ ಬೆಳಿಗ್ಗೆ 8 ಗಂಟೆಯವರೆಗೆ ಸಂಚಾರ ದಟ್ಟಣೆ ಉಂಟಾಗಿತ್ತು.



