ವಿಜಯಪುರ: ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದ್ದು, ಆಲಮಟ್ಟಿ ಜಲಾಶಯದ ಒಳಹರಿವಿನ ಪ್ರಮಾಣ 1 ಲಕ್ಷ ಕ್ಯೂಸೆಕ್ಸ್ ದಾಟಿದೆ.
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಸೋಮವಾರ ಭಾರೀ ಪ್ರಮಾಣದ ನೀರು ಹರಿದು ಬರುತ್ತಿದೆ. ಜಲಾಶಯಕ್ಕೆ 98,611 ಕ್ಯುಸೆಕ್ ನೀರಿನ ಒಳಹರಿವು ಇದೆ.
ಜಲಾಶಯದಿಂದ ಬಸವಸಾಗರ ಡ್ಯಾಂಗೆ 70 ಸಾವಿರ ಕ್ಯುಸೆಕ್ ನೀರು ಬಿಡಲಾಗುತ್ತಿದೆ. ಇದರಿಂದ ಕೃಷ್ಣಾ ತಟದಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಜನರಲ್ಲಿ ಪ್ರವಾಹದ ಭೀತಿ ಎದುರಾಗಿದೆ.
ಉತ್ತರ ಕರ್ನಾಟಕ ಭಾಗದ ಜೀವನದಿ ಕೃಷ್ಣ ನದಿ ಹಲವು ವರ್ಷಗಳ ನಂತರ ಜೂನ್ ತಿಂಗಳಲ್ಲಿ ತುಂಬಿ ಹರಿಯುತ್ತಿದ್ದು, ಆಲಮಟ್ಟಿ ಜಲಾಶಯ ಭರ್ತಿಗೆ ಕ್ಷಣಗಣನೆ ಆರಂಭವಾಗಿದೆ. 519.60 ಅಡಿ ಗರಿಷ್ಠ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ 516.21 ಅಡಿ ನೀರಿದೆ. 123.081 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಇಂದು 75.248 ಟಿಎಂಸಿ ನೀರಿದೆ.



