ಭೂಸ್ವಾಧೀನ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬಂದಿದ್ದ ರೈತ ಮೆಜೆಸ್ಟಿಕ್ ರಸ್ತೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.
ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದ ಮೈಸೂರು ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕರುಬರ ಹುಂಡಿ ನಿವಾಸಿ ಈಶ್ವರ್ (50) ಮೃತಪಟ್ಟಿದ್ದಾರೆ.
ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ಕೆಐಎಡಿಬಿಯಿಂದ ಭೂಸ್ವಾಧೀನ ಮಾಡುತ್ತಿರುವುದನ್ನು ವಿರೋಧಿಸಿ ರೈತ ಸಂಘಟನೆಗಳು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕರೆ ನೀಡಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಲು ಈಶ್ವರ್ ಬಂದಿದ್ದರು.
ರೈಲಿನ ಮೂಲಕ ಬಂದಿಳಿದಿದ್ದ ಈಶ್ವರ್ ಪ್ರತಿಭಟನೆಗೆ ತೆರಳುವಾಗ ಮೆಜೆಸ್ಟಿಕ್‌ನ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಶುಕ್ರವಾರ ಬೆಳಿಗ್ಗೆ ಕುಸಿದುಬಿದ್ದಿದ್ದಾರೆ.
ಕೂಡಲೇ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ರಕ್ತದೊತ್ತಡ ಮತ್ತು ಮಧುಮೇಹ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದಿರಬಹುದು ಎಂದು ಶಂಕಿಸಲಾಗಿದೆ. ಕಾಟನ್ ಪೇಟೆ ಠಾಣೆಯಲ್ಲಿ ಪ್ರಕರಣ ವರದಿಯಾಗಿದೆ.



