ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಸೋಲಿನ ಆಘಾತದಿಂದ ಹೊರಬಾರದ ವಿರಾಟ್ ಕೊಹ್ಲಿ ವಿಶ್ರಾಂತಿ ಅವಧಿಯನ್ನು ವಿಸ್ತರಿಸುವಂತೆ ಮನವಿ ಮಾಡಿದ್ದಾರೆ.
ಜೂನ್ 2ರಿಂದ ಟಿ-20 ವಿಶ್ವಕಪ್ ಟೂರ್ನಿ ಆರಂಭಗೊಳ್ಳಲಿದೆ. ಇದಕ್ಕಾಗಿ ಇರುವ ಏಕೈಕ ಅಭ್ಯಾಸ ಪಂದ್ಯ ಬಾಂಗ್ಲಾದೇಶ ವಿರುದ್ಧ ಜೂನ್ 1ರಂದು ನಡೆಯಲಿದೆ.
ವಿರಾಟ್ ಕೊಹ್ಲಿ ವಿಶ್ರಾಂತಿ ವಿಸ್ತರಣೆ ಕೇಳಿದ್ದರಿಂದ ಜೂನ್ 1ರಂದು ಬಾಂಗ್ಲಾದೇಶ ವಿರುದ್ಧದ ಏಕೈಕ ಅಭ್ಯಾಸ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಇದೆ.
ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿ ಆತಿಥ್ಯದಲ್ಲಿ ಟಿ-20 ವಿಶ್ವಕಪ್ ನಡೆಯಲಿದ್ದು, ಭಾರತ ಅಮೆರಿಕದಲ್ಲಿ ಬಾಂಗ್ಲಾದೇಶ ವಿರುದ್ಧ ಅಭ್ಯಾಸ ಪಂದ್ಯ ಆಡಲಿದೆ. ಜೂನ್ 9ರಂದು ಪಾಕಿಸ್ತಾನ ವಿರುದ್ಧ ಮೊದಲ ಪಂದ್ಯ ಆಡಲಿದೆ.
ಮೇ 30ರಂದು ವಿರಾಟ್ ಕೊಹ್ಲಿ ಅಮೆರಿಕದ ನ್ಯೂಯಾರ್ಕ್ ಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಭಾರತ ತಂಡದ ಮೊದಲ ತಂಡ ಈಗಾಗಲೇ ವಿಶ್ವಕಪ್ ಟೂರ್ನಿಗಾಗಿ ಅಮೆರಿಕಕ್ಕೆ ಪ್ರಯಾಣ ಬೆಳೆಸಿದೆ. ಆದರೆ ತಂಡದ ಜೊತೆ ಪ್ರಯಾಣ ಬೆಳೆಸದೇ ತಡವಾಗಿ ತಂಡವನ್ನು ಸೇರಿಕೊಳ್ಳಲಿದ್ದಾರೆ.
ಐಪಿಎಲ್ ಪ್ಲೇಆಫ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್ ಸಿಬಿ ಸೋಲುಂಡಿತ್ತು. ಇದರಿಂದ ಆರ್ ಸಿಬಿ ಪ್ರಶಸ್ತಿ ಗೆಲ್ಲುವ ಕನಸು ನುಚ್ಚುನೂರಾಗಿತ್ತು. ಲೀಗ್ ನ ಆರಂಭದಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ಆರ್ ಸಿಬಿ ಸತತ 6 ಪಂದ್ಯ ಜಯಭೇರಿ ಬಾರಿಸಿ ಪ್ಲೇಆಫ್ ಪ್ರವೇಶಿಸಿತ್ತು.