ಮೈಸೂರು:ರಾಹುಲ್ ಗಾಂಧಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ಶುಕ್ರವಾರ ರಾಹುಲ್ ಗಾಂಧಿ ಅವರನ್ನು ಡಿಕೆ ಶಿವಕುಮಾರ್ ಜೊತೆ ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದು ಮಾರ್ಗ ಮಧ್ಯೆ ಭೇಟಿ ಮಾಡಲಾಗಿದೆ. ಸಂಜೆ ದೆಹಲಿಗೆ ತೆರಳುವಾಗಲೂ ಬೀಳ್ಕೊಡಲಾಗುವುದು ಎಂದರು.
ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಬಗ್ಗೆ ಗೊಂದಲಗಳ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ. ಈ ಬಗ್ಗೆ ನಾನು ಮತ್ತು ಡಿಕೆ ಶಿವಕುಮಾರ್ ಮಾತನಾಡಬೇಕು. ಡಿಕೆಶಿ ಏನಾದರೂ ಮಾತನಾಡಿದ್ದಾರಾ? ನಾನೇನಾದರೂ ಹೇಳಿದ್ದೀನಾ? ಎಂದರು.
ಪಕ್ಷದ ಶಾಸಕರೇ ಈ ಬಗ್ಗೆ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಶಾಸಕರಿಗೆ ಈ ಕುರಿತು ತಿಳಿದಿರುವುದಿಲ್ಲ. ನಾನು ಅಥವಾ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಬೇಕು. ಯಾರೋ ಮಾಹಿತಿ ಇಲ್ಲದ ಶಾಸಕರು ಮಾತನಾಡುತ್ತಾರೆ ಅಂದರೆ ಅವರಿಗೆ ನಾನು ಪ್ರತಿಕ್ರಿಯೆ ಕೊಡಬೇಕಾ ಎಂದು ಪ್ರಶ್ನಿಸಿದರು.
ಅಧಿಕಾರ ಹಂಚಿಕೆ ವಿಚಾರದಲ್ಲಿ ಅಂತಿಮವಾಗಿ ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳಲಾಗುವುದು ಎಂದರು. ಶಾಸಕರಿಗಿಂತ ಹೆಚ್ಚಾಗಿ ಮಾಧ್ಯಮಗಳೇ ಈ ಕುರಿತು ಹೆಚ್ಚು ಮಾತನಾಡುತ್ತಿವೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸರ್ಕಾರ ಸಿದ್ಧ
ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಬಿಜೆಪಿ ಜೆಡಿಎಸ್ ನಿಂದ ಪಾಲಿಕೆ ಚುನಾವಣೆಗಳಲ್ಲಿ ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.
ಮಾರ್ಚ್ ಮೊದಲ ವಾರದಲ್ಲಿ ಬಜೆಟ್
ಬಹುತೇಕ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸಲಾಗುವುದು. ಈ ಬಗ್ಗೆ ಚರ್ಚಿಸಿ ದಿನಾಂಕ ನಿಗದಿಪಡಿಸಲಾಗುವುದು ಎಂದು ಅವರು ಹೇಳಿದರು.
ಮುಖ್ಯಮಂತ್ರಿಯಾಗಿ ಸಾವಿರ ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಫೆಬ್ರವರಿ 13ರಂದು ಹಾವೇರಿಯಲ್ಲಿ ಸಾಧನಾ ಸಮಾವೇಶವನ್ನು ಆಯೋಜಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ ಅವರು ರಾಜ ರಾಜಕಾರಣಕ್ಕೆ ಮರಳುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಈಗ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು ಕ್ರಿಯಾಶೀಲರಾಗಿದ್ದಾರೆ. ಅವರ ವರ್ತನೆ, ಹಾವಭಾವ ಇವುಗಳನ್ನು ಮಾಧ್ಯಮಗಳೇ ಗಮನಿಸಬೇಕು ನಾವು ಗಮನಿಸುವುದಿಲ್ಲ ಎಂದರು.



