ಮಾಜಿ ಚಾಂಪಿಯನ್ ವೆಸ್ಟ್ ಇಂಡೀಸ್ ತಂಡ 13 ರನ್ ಗಳಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೂಪರ್-8 ಪ್ರವೇಶಿಸಿದೆ.
ಟರೌಬಾದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 149 ರನ್ ಪೇರಿಸಿತು. ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ನ್ಯೂಜಿಲೆಂಡ್ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 136 ರನ್ ಗಳಿಸಲಷ್ಟೇ ಶಕ್ತವಾಯಿತು.
ಅಲ್ಜರಿ ಜೋಸೆಫ್ ಮತ್ತು ಗುಡಾಕೇಶ್ ಮೊಟಿ ಮಾರಕ ದಾಳಿಗೆ ತತ್ತರಿಸಿದ ನ್ಯೂಜಿಲೆಂಡ್ ಬ್ಯಾಟ್ಸ್ ಮನ್ ಗಳು ರನ್ ಗಳಿಸಲು ಪರದಾಡಿದರು. ಮಧ್ಯಮ ಕ್ರಮಾಂಕದಲ್ಲಿ ಗ್ಲೆನ್ ಫಿಲಿಪ್ಸ್ 33 ಎಸೆತಗಳಲ್ಲಿ 3 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ 40 ರನ್ ಗಳಿಸಿದರು. ಫಿನ್ (26), ಮಿಚೆಲ್ ಸ್ಯಾಂಟ್ನರ್ (21) ಮಾತ್ರ ತಕ್ಕಮಟ್ಟಿಗೆ ಹೋರಾಟ ನಡೆಸಿದ್ದು ಬಿಟ್ಟರೆ ಉಳಿದವರು ಅಲ್ಪ ಮೊತ್ತಕ್ಕೆ ನಿರ್ಗಮಿಸಿದರು.
ಇದಕ್ಕೂ ಮುನ್ನ ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ ಕೂಡ 76 ರನ್ ಗೆ 6 ವಿಕೆಟ್ ಕಳೆದುಕೊಂಡು ಕಳಪೆ ಮೊತ್ತಕ್ಕೆ ಔಟಾಗುವ ಭೀತಿ ಎದುರಿಸಿತ್ತು. ಆದರೆ ಶೆಫರ್ಡ್ ರುದರ್ ಫೋರ್ಡ್ 39 ಎಸೆತಗಳಲ್ಲಿ 2 ಬೌಂಡರಿ ಮತ್ತು 6 ಸಿಕ್ಸರ್ ಸಹಾಯದಿಂದ 68 ರನ್ ಸಿಡಿಸಿ ಏಕಾಂಗಿಯಾಗಿ ತಂಡವನ್ನು ಉತ್ತಮ ಮೊತ್ತದತ್ತ ಕೊಂಡೊಯ್ದರು.