ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ವ್ಯಕ್ತಿಯ ಕೊಲೆ ಆರೋಪ ಎದುರಿಸುತ್ತಿರುವ ನಟ ದರ್ಶನ್ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿಯಾಗಿ ಮುಂದುವರಿಸುವುದಿಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಹತ್ಯೆ ಪ್ರಕರಣ ಪಾರದರ್ಶಕವಾಗಿ ತನಿಖೆ ನಡೆಸಲಾಗುತ್ತಿದೆ. ದರ್ಶನ್‍ಗೆ ರಾಜಮರ್ಯಾದೆಯ ಪ್ರಶ್ನೆಯೇ ಇಲ್ಲ. ಗಂಭೀರ ಆರೋಪ ಎದುರಿಸುತ್ತಿರುವಾಗ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದಿದ್ದಾರೆ.
ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ವಿಚಾರವಾಗಿ ಮಾತನಾಡಿ, ಇದರಲ್ಲಿ ಯಾವುದೇ ರಾಜಕೀಯ ದ್ವೇಷವಿಲ್ಲ. ಪೋಕ್ಸೋ ಕಾಯ್ದೆ ಅತ್ಯಂತ ಗಂಭೀರವಾದದ್ದು. ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ದೌರ್ಜನ್ಯವಾದರೆ ಈ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗುತ್ತದೆ. ಇದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲು ಬರುವುದಿಲ್ಲ ಎಂದಿದ್ದಾರೆ.
ಪೋಕ್ಸೋ ವಿಚಾರವಾಗಿ, ಚಿತ್ರದುರ್ಗದ ಮುರುಘಾ ಮಠದ ಸ್ವಾಮಿಗಳ ಪ್ರಕರಣವನ್ನು ನೋಡಿದ್ದೀರಿ. ಪೋಕ್ಸೋ ಕಾಯ್ದೆ ಅಡಿ ತನ್ನದೇ ಆದ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಇದರಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯ ಪ್ರಶ್ನೆ ಬರಲ್ಲ. ಯಡಿಯೂರಪ್ಪ ತಪ್ಪಿತಸ್ಥರು ಹೌದೋ? ಅಲ್ಲವೋ? ಎನ್ನುವುದನ್ನು ನ್ಯಾಯಾಲಯ ನಿರ್ಧರಿಸುತ್ತದೆ. ಸಂತ್ರಸ್ತೆಯೇ ನ್ಯಾಯಾಧೀಶರ ಎದುರು ಹೇಳಿಕೆ ಕೊಟ್ಟಿದ್ದಾರೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.