ಬೆಂಗಳೂರು: ಒಳಮೀಸಲಾತಿ ರಹಿತ ಹಳೆ ಮೀಸಲಾತಿಯ ಜಾರಿಗಾಗಿ ಒತ್ತಾಯಿಸಿ ನಗರದಲ್ಲಿ ಬುಧವಾರ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು.
ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ ಸಾವಿರಾರು ಮಂದಿ ಸಿಟಿ ರೈಲು ನಿಲ್ದಾಣದಿಂದ ಮೆರವಣಿಗೆ ನಡೆಸಿ ಫ್ರೀಡಂ ಪಾರ್ಕ್ ನಲ್ಲಿ ಸಮಾವೇಶಗೊಂಡರು.
ಸಭೆಯಲ್ಲಿ ಮಾತನಾಡಿದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ಒಳ ಮೀಸಲಾತಿ ಕುರಿತು ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಅವೈಜ್ಞಾನಿಕ, ಅಪೂರ್ಣ, ದೋಷಪೂರಿತ ಹಾಗೂ ಪಕ್ಷಪಾತದಿಂದ ಕೂಡಿರುವ ನಾಗಮೋಹನ ದಾಸ್ ಆಯೋಗದ ವರದಿಯನ್ನು ತಿರಸ್ಕರಿಸುವಂತೆ ಅವರು ಒತ್ತಾಯಿಸಿದರು.
ಬಲಗೈ ಸಮುದಾಯವನ್ನು ಬಿ ಗುಂಪಿಗೆ ಸೇರಿಸುವ ಮೂಲಕ ಯಾವುದೇ ಉನ್ನತ ಹುದ್ದೆಗಳು ಸಿಗದಂತೆ ನೋಡಿಕೊಳ್ಳಲಾಗಿದೆ. ರೋಸ್ಟರ್ ಬಿಂದು ದೋಷಪೂರಿತವಾಗಿದೆ. ಮೀಸಲಾತಿ ಪ್ರಮಾಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ಗೊಂದಲ ಸೃಷ್ಟಿಯಾಗಿದೆ’ ಎಂದು ಅವರು ಹೇಳಿದರು.
ರಾಜ್ಯ ಸರ್ಕಾರವು ಯಾವುದೇ ಮಾನದಂಡವನ್ನು ಅನುಸರಿಸದೇ ಅವೈಜ್ಞಾನಿಕವಾಗಿ ಹೊರಡಿಸಿರುವ ಮೀಸಲಾತಿ ಆದೇಶವನ್ನು ಹಿಂಪಡೆದು ಪರಿಶಿಷ್ಟ ಜಾತಿ ಸಮುದಾಯಕ್ಕೆ ಈಗಾಗಲೇ ನೀಡಿರುವ ಖಾಯಂ ಜಾತಿ ಪ್ರಮಾಣ ಪತ್ರಗಳನ್ನು ಹೊಸ ಜಾತಿ ಪ್ರಮಾಣ ಪತ್ರಗಳೊಂದಿಗೆ ಪರಿಗಣಿಸಲು ಸೂಕ್ತ ಆದೇಶ ಹೊರಡಿಸುವಂತೆ ಒತ್ತಾಯಿಸಿದರು.
ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಸೇರಿರುವ 63 ಜಾತಿಗಳನ್ನು ಬಲಗೈ ಗುಂಪಿನಲ್ಲಿ ಉದ್ಯೋಗ, ಶಿಕ್ಷಣ ಮತ್ತು ಇತರೆ ಸೌಲಭ್ಯ ಪಡೆಯಲು ಅಧಿಸೂಚನೆ ಹೊರಡಿಸುವುದು, ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳುವ ಮುನ್ನ ಎಲ್ಲಾ ಸಮುದಾಯಗಳ ಸ್ವಾಮೀಜಿಗಳನ್ನು ಕರೆದು ಚರ್ಚೆ ನಡೆಸಬೇಕು. ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಸೇರಿರುವ 63 ಜಾತಿಗಳ ಗುಂಪನ್ನು ಪಟ್ಟಿ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.



