ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ನೀಡಿದ್ದ ರಾಜೀನಾಮೆ ಅಂಗೀಕಾರಗೊಂಡಿದೆ. ಇದರ ಬೆನ್ನಲ್ಲೇ ಅಲ್ಪಸಂಖ್ಯಾತ ಸಮಿತಿಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ವಿಸರ್ಜಿಸಿದ್ದಾರೆ.
ಡಿ.ಕೆ. ಶಿವಕುಮಾರ್ ಭಾನುವಾರ ಬಿಡುಗಡೆ ಮಾಡಿದ ಮಾಧ್ಯಮ ಹೇಳಿಕೆಯಲ್ಲಿ ಅಬ್ದುಲ್ ಜಬ್ಬಾರ್ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ. ನೂತನ ಸಮಿತಿ ಶೀಘ್ರ ರಚನೆಗೆ ಕ್ರಮ ವಹಿಸಲಾಗಿದೆ ಎಂದು ಕೂಡ ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆ.
ಅಬ್ದುಲ್ ಜಬ್ಬಾರ್ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕ್ಷಾಂಕಿಯಾಗಿದ್ದರು. ಆದರೆ ಹೈಕಮಾಂಡ್ ಸಚಿವ ಮಲ್ಲಿಕಾರ್ಜುನ್ ಪುತ್ರ ಸಮರ್ಥ್ಗೆ ಟಿಕೆಟ್ ನೀಡಿತ್ತು. ಇದರಿಂದ ಜಬ್ಬಾರ್ ಅವರು ಅಸಮಾಧಾನಗೊಂಡಿದ್ದರು.
ಎಚ್ಚರಿಕೆಯಿಂದ ಪರಿಶೀಲಿಸಿದ ಬಳಿಕ ಹಾಗೂ ತೀವ್ರ ದುಃಖದಿಂದ ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಈ ಪತ್ರ ಬರೆಯುತ್ತಿದ್ದೇನೆ. ದುರದೃಷ್ಟವಶಾತ್, 2026ರ ಉಪಚುನಾವಣೆಯ ವೇಳೆ ದಾವಣಗೆರೆ ಜಿಲ್ಲೆ ಹಾಗೂ ರಾಜ್ಯದಲ್ಲಿ ನಡೆದ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಈ ನಿರ್ಧಾರಕ್ಕೆ ಕಾರಣವಾಗಿವೆ. ಈ ಬೆಳವಣಿಗೆಗಳಿಂದ ರಾಜ್ಯಾದ್ಯಂತ ಅಲ್ಪಸಂಖ್ಯಾತರು ತೀವ್ರ ನಿರಾಶೆಗೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದರು.
ಅಲ್ಪಸಂಖ್ಯಾತ, ವಕ್ಫ್ ಮತ್ತು ವಸತಿ ಸಚಿವ ಬಿ. ಜಮೀರ್ ಅಹ್ಮದ್ ಖಾನ್ ಅವರು ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕರಾಗಿದ್ದಾರೆ. ಅವರು ಭೇಟಿ ನೀಡುವ ಎಲ್ಲೆಡೆ ಅವರಿಗೆ ಅಪಾರ ಗೌರವ ಹಾಗೂ ಹಾಗೂ ಜನ ಬೆಂಬಲವಿದೆ. ಆದರೆ ಉಪಚುನಾವಣಾ ಪ್ರಚಾರಕ್ಕಾಗಿ ದಾವಣಗೆರೆಗೆ ಬರಬಾರದು ಎಂದು ಎರಡು ಬಾರಿ ಅಗೌರವದಿಂದ ಉಲ್ಲೇಖಿಸಲಾಗಿದೆ ಎಂದು ತಿಳಿಸಿದ್ದರು.
ರಾಜ್ಯಾದ್ಯಂತ ಅಲ್ಪಸಂಖ್ಯಾತ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಸ್ಲಿಂ ಸಮುದಾಯದಲ್ಲಿ ಅಸಮಾಧಾನ ಉಂಟಾಗಿದೆ. ಈ ಕುರಿತು ಪಕ್ಷದಿಂದ ಯಾವುದೇ ಶಿಸ್ತು ಕ್ರಮ ಕೈಗೊಳ್ಳಲಾಗಿಲ್ಲ. ಇದುವರೆಗೆ ಕ್ಷಮೆಯಾಚನೆಯೂ ಆಗಿಲ್ಲ ಎಂದು ಪತ್ರದಲ್ಲಿ ವಿವರಿಸಿದ್ದರು.


