ವಿದೇಶದಿಂದ ಮರಳುತ್ತಿದ್ದಂತೆ ಸಚಿವರ ತುರ್ತು ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಸುಮಾರು 4.5 ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿದ್ದು, ಬಾಕಿ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ.
ಗುರುವಾರ ಸಂಜೆ 5 ಗಂಟೆಗೆ 5 ದೇಶಗಳಿಗೆ ಭೇಟಿ ನೀಡಿ ಮರಳಿದ ಬೆನ್ನಲ್ಲೇ ಸಚಿವರ ಸಭೆ ನಡೆಸಿದ ಪ್ರಧಾನಿ ಮಧ್ಯಪ್ರಾಚ್ಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದೇಶದಲ್ಲಿ ಉದ್ಭವಿಸಬಹುದಾದ ಸಮಸ್ಯೆಗಳ ಬಗ್ಗೆ ಗಮನ ಹರಿಸಿ ಕೂಡಲೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶ್ರಮ ವಹಿಸುವಂತೆ ಅವರು ಸೂಚಿಸಿದರು.
ಅನಗತ್ಯ ವಿವಾದಗಳಿಗೆ ಸಿಲುಕುವುದು, ಮಾಧ್ಯಮಗಳ ಮುಂದೆ ಅನಗತ್ಯ ಹೇಳಿಕೆ ನೀಡುವುದು ಮಾಡಬಾರದು. ಸಚಿವರು 2047ರ ನಿಕ್ಷಿತ್ ಭಾರತ್ ಪರಿಕಲ್ಪನೆ ಸಾಕಾರಗೊಳಿಸಲು ಕೆಲಸ ಕಾರ್ಯಗಳನ್ನು ಚುರುಕುಗೊಳಿಸಬೇಕು. ಹಾಗೂ ಬಾಕಿ ಇರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಸರ್ಕಾರದ ಹಿಂದಿನ ಸಾಧನೆಗಳನ್ನು ಮೆಲುಕು ಹಾಕುತ್ತಾ ಸಮಯ ವ್ಯರ್ಥ ಮಾಡದೇ ಭವಿಷ್ಯದ ದೃಷ್ಟಿಯಿಂದ ಕೆಲಸ ಮಾಡಬೇಕು. ಕಾಮಗಾರಿಗಳ ವೇಗವನ್ನು ಹೆಚ್ಚಿಸಬೇಕು ಎಂದು ಅವರು ಆಗ್ರಹಿಸಿದರು.
2014ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ಈಗ 2026 ಆಗಿದೆ. ನಾವು ಏನು ಭರವಸೆ ನೀಡಿದ್ದೇವೆ. ಇದುವರೆಗೆ ಏನು ಸಾಧಿಸಿದ್ದೇವೆ ಎಂಬುದು ಮುಖ್ಯವಲ್ಲ. ಭವಿಷ್ಯದ ದೃಷ್ಟಿಯಿಂದ ನಾವು ಇನ್ನೂ ಏನು ಮಾಡಬೇಕಿತ್ತು ಎಂಬ ಬಗ್ಗೆ ಯೋಚಿಸಿ ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಸೂಚಿಸಿದ್ದಾರೆ.



