Tuesday, June 23, 2026
Google search engine
Homeರಾಜ್ಯಗ್ರಾಮೀಣ ಪ್ರದೇಶದ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ವಿನಾಯಿತಿ: ರಾಜ್ಯ ಸರ್ಕಾರ ಮಹತ್ವದ ಆದೇಶ

ಗ್ರಾಮೀಣ ಪ್ರದೇಶದ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ವಿನಾಯಿತಿ: ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು: ಕರ್ನಾಟಕ ಸರ್ಕಾರವು ರಾಜ್ಯದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ನೀಡುವ ಪ್ರಕ್ರಿಯೆಯನ್ನು ಸರಳಗೊಳಿಸುವ ಮಹತ್ವದ ಆದೇಶವನ್ನು ಹೊರಡಿಸಿದೆ.

ಜೂನ್ 20ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ 2400 ಚದರ ಅಡಿಗಳವರೆಗೆ (+20% ಹೆಚ್ಚುವರಿ ವ್ಯತ್ಯಾಸದ ಮಿತಿಯೊಂದಿಗೆ) ನಿವೇಶನಗಳಲ್ಲಿ ನಿರ್ಮಿಸಲಾದ ಜಿ+3 ಅಂತಸ್ತಿನ ವಸತಿ ಕಟ್ಟಡಗಳು ಅಥವಾ ಸ್ಟಿಲ್ಟ್ ಪಾರ್ಕಿಂಗ್ + 4 ಮಹಡಿಗಳನ್ನು ಹೊಂದಿರುವ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ವಿಶೇಷ ವಿನಾಯಿತಿ ನೀಡಲು ತೀರ್ಮಾನಿಸಲಾಗಿದೆ.

ಈ ವಿನಾಯಿತಿ 31 ಮೇ 2026ರೊಳಗಾಗಿ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿರುವವರು, ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ನಿರ್ಮಿಸಿರುವವರು ಹಾಗೂ ಯಾವುದೇ ವಿದ್ಯುತ್ ಸಂಪರ್ಕ ಪಡೆಯದೇ ಕಟ್ಟಡ ಪೂರ್ಣಗೊಳಿಸಿರುವವರಿಗೆ ಮಾತ್ರ ಅನ್ವಯಿಸುತ್ತದೆ.

ಇಂತಹ ಅರ್ಜಿದಾರರಿಗೆ ಆದೇಶ ಹೊರಡಿಸಿದ ದಿನಾಂಕದಿಂದ 15 ದಿನಗಳವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಒಂದು ಬಾರಿಗೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆಯುವುದರಿಂದ ವಿದ್ಯುತ್ ಸಂಪರ್ಕಕ್ಕೆ ವಿನಾಯಿತಿ ದೊರೆಯಲಿದೆ.

ಸಚಿವ ಸಂಪುಟವು ಗ್ರಾಮೀಣ ಪ್ರದೇಶಗಳಲ್ಲಿ ರೈತರು ವಾಸಿಸುವ ಮನೆ, ತೋಟದ ಮನೆ, ಕೃಷಿ ಉಪಕರಣಗಳನ್ನು ಇಡುವ ಮನೆ, ದನದ ಕೊಟ್ಟಿಗೆ, ರೇಷ್ಮೆ ಗೂಡಿನ ಮನೆಗಳಿಗೆ ಸಹ ಇದೇ ರೀತಿಯ ವಿನಾಯಿತಿ ನೀಡಲು ನಿರ್ಧರಿಸಿದೆ.

ಇದರಿಂದ ಗ್ರಾಮೀಣ ಜನತೆಗೆ ವಿದ್ಯುತ್ ಸಂಪರ್ಕ ಪಡೆಯುವಲ್ಲಿ ಆಡಳಿತಾತ್ಮಕ ತೊಂದರೆ ಕಡಿಮೆಯಾಗಲಿದೆ. ವಿದ್ಯುತ್‌ ಸರಬರಾಜು ಕಂಪನಿಗಳು ಅನುಸರಿಸಬೇಕಾದ ಸಾಮಾನ್ಯ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲು ತೀರ್ಮಾನಿಸಲಾಗಿದೆ.

ಈ ನಿರ್ಧಾರವನ್ನು ಜಾರಿಗೊಳಿಸಲು ಇಂಧನ ಇಲಾಖೆಗೆ ಸಚಿವ ಸಂಪುಟವು ಸ್ಪಷ್ಟ ಸೂಚನೆ ನೀಡಿದೆ. ಆದೇಶದ ಪ್ರತಿಗಳನ್ನು ಮಹಾಲೇಖಪಾಲರು, ಸರ್ಕಾರದ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ, ವಿವಿಧ ವಿದ್ಯುತ್ ಸರಬರಾಜು ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಇಂಧನ ಇಲಾಖೆಯ ಅಧಿಕಾರಿಗಳಿಗೆ ಕಳುಹಿಸಲಾಗಿದೆ. ಈ ನಿರ್ಧಾರದಿಂದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯುವ ಪ್ರಕ್ರಿಯೆ ಸುಗಮವಾಗಲಿದೆ ಎಂದು ಸರ್ಕಾರ ವಿಶ್ವಾಸ ವ್ಯಕ್ತಪಡಿಸಿದೆ.

ಸಾರ್ವಜನಿಕ ಹಿತದೃಷ್ಟಿಯಿಂದ ಸಚಿವ ಸಂಪುಟದ ನಿರ್ಣಯದ ಆಧಾರದ ಮೇಲೆ ಈ ಆದೇಶ ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments