ದಾವಣಗೆರೆ: ಜಿಲ್ಲೆಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪಾಕಿಸ್ತಾನ ಮೂಲದ ವ್ಯಕ್ತಿಗಳೊಂದಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಸಂಪರ್ಕದಲ್ಲಿದ್ದ ಉತ್ತರ ಪ್ರದೇಶ ಮೂಲದ ಯುವಕನೊಬ್ಬನನ್ನು ದಸ್ತಗಿರಿ ಮಾಡಲಾಗಿದೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ. ಶೇಖರ್ ತಿಳಿಸಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ಹರಿಹರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅವರು ಕಾರ್ಯಾಚರಣೆ ನಡೆಸಿ, ಅನುಮಾನಾಸ್ಪದವಾಗಿ ಓಡಾಡುತ್ತಿದ್ದ 20 ವರ್ಷದ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಈ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.
ಪೇಂಟಿಂಗ್ ಕೆಲಸಕ್ಕೆ ಬಂದಿದ್ದ ಯುವಕ
ಬಂಧಿತ ಯುವಕ ಮೂಲತಃ ಉತ್ತರ ಪ್ರದೇಶದ ನಿವಾಸಿಯಾಗಿದ್ದು, ಸುಮಾರು 15 ದಿನಗಳ ಹಿಂದಷ್ಟೇ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಫ್ಯಾಕ್ಟರಿಯೊಂದರಲ್ಲಿ ಪೇಂಟಿಂಗ್ ಕೆಲಸಕ್ಕಾಗಿ ಬಂದಿದ್ದ. ಫ್ಯಾಕ್ಟರಿ ಸಮೀಪದ ಹಳ್ಳಿಯೊಂದರಲ್ಲಿ ವಾಸವಿದ್ದ ಈತನ ಚಟುವಟಿಕೆಗಳ ಬಗ್ಗೆ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದರು.
ಮೊಬೈಲ್‌ನಲ್ಲಿ ಪಾಕ್ ಲಿಂಕ್ ಪತ್ತೆ
ಆರೋಪಿಯ ಮೊಬೈಲ್ ಫೋನ್ ಪರಿಶೀಲಿಸಿದಾಗ, ಆತ ವಾಟ್ಸಾಪ್ ಗ್ರೂಪ್‌ಗಳು ಹಾಗೂ ಇತರೆ ಸಾಮಾಜಿಕ ಜಾಲತಾಣಗಳ (ಸೋಶಿಯಲ್ ಮೀಡಿಯಾ) ಮೂಲಕ ಪಾಕಿಸ್ತಾನ ಮೂಲದ ವ್ಯಕ್ತಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದು ಪತ್ತೆಯಾಗಿದೆ.
ಆರೋಪಿಯ ಆನ್‌ಲೈನ್ ಚಟುವಟಿಕೆಗಳನ್ನು ಗಮನಿಸಿ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆತನನ್ನು ದಸ್ತಗಿರಿ ಮಾಡಲಾಗಿದೆ. ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಎಸ್‌ಪಿ ಎಚ್.ಟಿ. ಶೇಖರ್ ತಿಳಿಸಿದರು.
ತುಮಕೂರು ಪ್ರಕರಣದೊಂದಿಗೆ ಸಾಮ್ಯತೆ?
ಪ್ರಾಥಮಿಕ ತನಿಖೆಯ ಪ್ರಕಾರ, ವಿಧ್ವಂಸಕ ಕೃತ್ಯಗಳ ಹಿನ್ನೆಲೆಯುಳ್ಳ ವ್ಯಕ್ತಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾಗಿ, ಆನ್‌ಲೈನ್‌ನಲ್ಲಿ ಪರಸ್ಪರ ಸಂಪರ್ಕದಲ್ಲಿರುವುದು ಕಂಡುಬಂದಿದೆ.
ಇತ್ತೀಚೆಗೆ ತುಮಕೂರು ಜಿಲ್ಲೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೂ ಹಾಗೂ ಈ ಪ್ರಕರಣಕ್ಕೂ ಸಾಮ್ಯತೆ ಇರುವಂತೆ ಮೇಲ್ನೋಟಕ್ಕೆ ಕಂಡುಬರುತ್ತಿದ್ದು, ತನಿಖೆಯ ನಂತರವಷ್ಟೇ ಈ ಬಗ್ಗೆ ನಿಖರ ಮಾಹಿತಿ ಲಭ್ಯವಾಗಲಿದೆ ಎಂದು ಎಸ್‌ಪಿ ಸ್ಪಷ್ಟಪಡಿಸಿದರು.
ಹತ್ತು ಜನರ ತಂಡದ ಮೇಲೂ ನಿಗಾ
ಖಾಸಗಿ ಫ್ಯಾಕ್ಟರಿ ಕೆಲಸಕ್ಕಾಗಿ ಈತನ ಜೊತೆ ಸುಮಾರು 10 ಜನರ ತಂಡ ಬಂದಿದ್ದು, ಉಳಿದವರ ಹಿನ್ನೆಲೆಯ ಬಗ್ಗೆಯೂ ಪೊಲೀಸರು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ತನಿಖೆಯನ್ನು ತೀವ್ರಗೊಳಿಸಲಾಗಿದ್ದು, ಎಲ್ಲಾ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ತಿಳಿಸಿದರು



