Thursday, July 2, 2026
Google search engine
Homeಬೆಂಗಳೂರುಬೀದಿ ಬದಿ ವ್ಯಾಪಾರಿ ಮಾತ್ರವಲ್ಲ, ಅಡೆತಡೆ, ಅನಾಥ ವಾಹನ, ಅಕ್ರಮ ಪಾರ್ಕಿಂಗ್ ವಾಹನಗಳ ತೆರವು

ಬೀದಿ ಬದಿ ವ್ಯಾಪಾರಿ ಮಾತ್ರವಲ್ಲ, ಅಡೆತಡೆ, ಅನಾಥ ವಾಹನ, ಅಕ್ರಮ ಪಾರ್ಕಿಂಗ್ ವಾಹನಗಳ ತೆರವು

ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವುದಿಲ್ಲ, ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಿಂದ ವಾರ್ಡ್ ರಸ್ತೆಗಳಿಗೆ ಸ್ಥಳಾಂತರಿಸುವ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದರು.

ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಕುರಿತು ಸಂಬಂಧಿತ ಅಧಿಕಾರಿಗಳ ಜೊತೆ ನಡೆದ ವರ್ಚುವಲ್ ಸಭೆ(VC)ಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾದಚಾರಿ ಮಾರ್ಗಗಳಿಂದ ಬೀದಿ ಬದಿ ವ್ಯಾಪಾರಿಗಳಷ್ಟೇ ಅಲ್ಲದೆ, ವಿವಿಧ ಅಡೆತಡೆಗಳು, ಅನಾಥ ವಾಹನಗಳು ಹಾಗೂ ಅಕ್ರಮವಾಗಿ ನಿಲ್ಲಿಸಿರುವ ಪಾರ್ಕಿಂಗ್ ವಾಹನಗಳನ್ನು ಸಹ ತೆರವುಗೊಳಿಸಿ, ನಾಗರಿಕರಿಗೆ ಸುಗಮ ಹಾಗೂ ವ್ಯವಸ್ಥಿತ ಪಾದಚಾರಿ ಮಾರ್ಗಗಳನ್ನು ನಿರ್ಮಿಸಬೇಕು ಎಂದು ಸೂಚಿಸಿದರು. ಈ ಸಂಬಂಧ ಎಲ್ಲ ಒತ್ತುವರಿಗಳನ್ನು ಹಂತ ಹಂತವಾಗಿ ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಪ್ರಮುಖ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳನ್ನು ಹೊರತುಪಡಿಸಿ, ಉಳಿದ ವಾರ್ಡ್ ರಸ್ತೆಗಳಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ನಡೆಸಲು ಅವಕಾಶ ಕಲ್ಪಿಸುವ ಕುರಿತು ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇರುವ ವ್ಯವಸ್ಥೆಯನ್ನು ಸಮರ್ಪಕವಾಗಿ ಬಳಸಿಕೊಂಡು ಕಾರ್ಯನಿರ್ವಹಿಸಿದರೆ ಸಾರ್ವಜನಿಕರ ಬೆಂಬಲವೂ ದೊರೆಯುತ್ತದೆ. ಅಸಾಧ್ಯವೆನಿಸುವ ಕೆಲಸವನ್ನೂ ಸಾಧಿಸಬಹುದು. ಈ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೆಂಗಳೂರಿನ ನಾಗರಿಕರಿಗೆ ಸುಗಮ, ಸುರಕ್ಷಿತ ಹಾಗೂ ವ್ಯವಸ್ಥಿತ ಪಾದಚಾರಿ ಮಾರ್ಗಗಳನ್ನು ನಿರ್ಮಿಸಿಕೊಡಬೇಕು ಎಂದು ಹೇಳಿದರು.

ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ:

ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಿದ ರಸ್ತೆಗಳಲ್ಲಿ ತಕ್ಷಣವೇ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸಬೇಕು. ಇತರೆ ರಸ್ತೆಗಳಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿಯನ್ನು ನಿರಂತರವಾಗಿ ತೆರವುಗೊಳಿಸುವ ಕಾರ್ಯವೂ ಸಮಾನಾಂತರವಾಗಿ ನಡೆಯಬೇಕು. ಪಾದಚಾರಿಗಳಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಉತ್ತಮ ಗುಣಮಟ್ಟದ ಪಾದಚಾರಿ ಮಾರ್ಗಗಳನ್ನು ನಿರ್ಮಿಸಬೇಕೆಂದು ಸೂಚಿಸಿದರು.

ಅಭಿವೃದ್ಧಿಪಡಿಸಿದ ಪಾದಚಾರಿ ಮಾರ್ಗಗಳ ಪರಿಶೀಲನೆ:

ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲೂ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯ ಪೂರ್ಣಗೊಂಡ ಬಳಿಕ, ಅವುಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಬೇಕು. ನಂತರ ಸ್ಥಳೀಯ ನಾಗರಿಕರೊಂದಿಗೆ ಅಭಿವೃದ್ಧಿಪಡಿಸಿದ ಪಾದಚಾರಿ ಮಾರ್ಗಗಳ ಪರಿಶೀಲನೆ ನಡೆಸಿ, ಸಾರ್ವಜನಿಕರ ಅಭಿಪ್ರಾಯವನ್ನೂ ಪಡೆಯಬೇಕು ಎಂದು ಸೂಚಿಸಿದರು.

ಜುಲೈ 10ರಿಂದ ಅನಾಥ ವಾಹನಗಳ ತೆರವು ಅಭಿಯಾನ

ನಗರದ ರಸ್ತೆ ಬದಿಗಳಲ್ಲಿ ನಿಂತಿರುವ ಅನಾಥ ವಾಹನಗಳ ತೆರವು ಕಾರ್ಯಾಚರಣೆಯನ್ನು ಜುಲೈ 10ರಿಂದ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಸಂಬಂಧ ನಗರ ಪಾಲಿಕೆ ಹಾಗೂ ಸಂಚಾರಿ ಪೊಲೀಸರ ಸಮನ್ವಯದೊಂದಿಗೆ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿ, ವ್ಯವಸ್ಥಿತ ಕಾರ್ಯಯೋಜನೆ ರೂಪಿಸಿ ಅಭಿಯಾನವನ್ನು ಪರಿಣಾಮಕಾರಿಯಾಗಿ ನಡೆಸುವಂತೆ ಸೂಚಿಸಿದರು.

ಬೃಹತ್ ತ್ಯಾಜ್ಯ ಹಾಗೂ ಗಿಡಗಂಟಿಗಳ ತೆರವು

ನಗರದಲ್ಲಿರುವ ಬೃಹತ್ ಕಟ್ಟಡ ತ್ಯಾಜ್ಯ ಹಾಗೂ ಗಿಡಗಂಟಿಗಳ ತೆರವು ಅಭಿಯಾನವನ್ನು ಜುಲೈ 15ರ ನಂತರ ಆರಂಭಿಸಲು ಯೋಜನೆ ರೂಪಿಸಬೇಕು. ಈ ಅಭಿಯಾನವನ್ನು ನಗರ ಪಾಲಿಕೆ, ಮೆಟ್ರೋ ಹಾಗೂ ರೈಲ್ವೆ ಇಲಾಖೆಗಳ ಸಹಯೋಗದಲ್ಲಿ ಜಂಟಿಯಾಗಿ ನಡೆಸಿ, ನಗರವನ್ನು ಮತ್ತಷ್ಟು ಸ್ವಚ್ಛ ಹಾಗೂ ಸುಂದರಗೊಳಿಸುವ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಪಾದಚಾರಿ ಮಾರ್ಗಗಳ ಮೇಲಿನ ರ‍್ಯಾಂಪ್‌ಗಳ ತೆರವು

ನಗರದಲ್ಲಿ ಮತ್ತೊಂದು ಪ್ರಮುಖ ಸಮಸ್ಯೆಯೆಂದರೆ ಮನೆಗಳು ಹಾಗೂ ವಾಣಿಜ್ಯ ಕಟ್ಟಡಗಳ ಮುಂಭಾಗದಲ್ಲಿ ವಾಹನಗಳ ಪ್ರವೇಶಕ್ಕಾಗಿ ಪಾದಚಾರಿ ಮಾರ್ಗಗಳ ಮೇಲೆ ರ‍್ಯಾಂಪ್‌ಗಳನ್ನು ನಿರ್ಮಿಸಲಾಗಿದೆ. ಇದರಿಂದ ಪಾದಚಾರಿಗಳ ಓಡಾಟಕ್ಕೆ ತೀವ್ರ ತೊಂದರೆಯಾಗುತ್ತಿದೆ. ಆದ್ದರಿಂದ ಮುಂದಿನ ಹಂತದಲ್ಲಿ ಇಂತಹ ರ‍್ಯಾಂಪ್‌ಗಳನ್ನು ತೆರವುಗೊಳಿಸುವ ವಿಶೇಷ ಕಾರ್ಯಾಚರಣೆಯನ್ನು ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ನಗರ ಪಾಲಿಕೆಗಳ ಆಯುಕ್ತರಾದ ರಮೇಶ್ ಡಿ.ಎಸ್., ಪೊಮ್ಮಲ ಸುನೀಲ್ ಕುಮಾರ್, ಜಿ. ಜಗದೀಶ್, ರಮೇಶ್ ಕೆ.ಎನ್., ಡಾ. ರಾಜೇಂದ್ರ ಕೆ.ವಿ., ಮುಖ್ಯ ಅಭಿಯಂತರರು ಹಾಗೂ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments