Tuesday, July 28, 2026
Google search engine
Homeರಾಜ್ಯಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಟ: ಕಠಿಣ ಕ್ರಮಕ್ಕೆ ಡಿಜಿಪಿಗೆ ನಿರ್ದೇಶನ

ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಟ: ಕಠಿಣ ಕ್ರಮಕ್ಕೆ ಡಿಜಿಪಿಗೆ ನಿರ್ದೇಶನ

ಬೆಂಗಳೂರು: ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಹಾಗೂ ಸಾಗಾಣಿಕೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ಉದ್ದೇಶದಿಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನದ ಮೇರೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿ ಮತ್ತು ಐಜಿಪಿ) ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತರು, ಪೊಲೀಸ್ ಮಹಾನಿರೀಕ್ಷಕರು, ಉಪ ಮಹಾನಿರೀಕ್ಷಕರು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸಮಗ್ರ ಸುತ್ತೋಲೆ ಹೊರಡಿಸಿದ್ದಾರೆ.

ಅಕ್ರಮ ಮರಳು ಗಣಿಗಾರಿಕೆ ಪರಿಸರಕ್ಕೆ ಹಾನಿ ಉಂಟುಮಾಡುವುದಲ್ಲದೆ, ಕಾನೂನು ಸುವ್ಯವಸ್ಥೆ ಮತ್ತು ಸರ್ಕಾರದ ಆದಾಯಕ್ಕೂ ಧಕ್ಕೆ ತರುತ್ತಿದೆ. ಇಂತಹ ಅಕ್ರಮ ಚಟುವಟಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸದ ‘ಶೂನ್ಯ ಸಹಿಷ್ಣುತೆ (Zero Tolerance)’ ನೀತಿಯನ್ನು ಸರ್ಕಾರ ಅನುಸರಿಸುತ್ತಿದ್ದು, ರಾಜ್ಯಾದ್ಯಂತ ಕಟ್ಟುನಿಟ್ಟಿನ ಜಾರಿಯನ್ನು ಖಚಿತಪಡಿಸಲು ಈ ಸುತ್ತೋಲೆ ಹೊರಡಿಸಲಾಗಿದೆ.

ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ ರಾಜ್ಯದ ನೈಸರ್ಗಿಕ ಸಂಪತ್ತಿನ ಲೂಟಿ ಮಾತ್ರವಲ್ಲ, ಇದು ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸವಾಲು ಎಸೆಯುವ ಗಂಭೀರ ಅಪರಾಧವಾಗಿದೆ. ಸರ್ಕಾರ ಯಾವುದೇ ಅಕ್ರಮ ಚಟುವಟಿಕೆಯನ್ನು ಸಹಿಸುವುದಿಲ್ಲ. ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಸುತ್ತೋಲೆಯಲ್ಲಿ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಈಗಾಗಲೇ ರಚಿಸಲಾಗಿರುವ ಟಾಸ್ಕ್ ಫೋರ್ಸ್‌ಗಳನ್ನು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ಅಕ್ರಮ ಮರಳು ಗಣಿಗಾರಿಕೆ ನಡೆಯುವ ಪ್ರದೇಶಗಳನ್ನು ಗುರುತಿಸಿ ನಿರಂತರ ನಿಗಾ ವಹಿಸುವುದು, ಅಕ್ರಮ ಸಾಗಾಣಿಕೆ ಮತ್ತು ಸಂಗ್ರಹಣೆಯನ್ನು ತಡೆಯುವುದು ಹಾಗೂ ಕಾನೂನು ಕ್ರಮ ಕೈಗೊಳ್ಳುವುದು ಸಂಬಂಧಿತ ಪೊಲೀಸ್ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.

ರಾಜ್ಯದ ಗಡಿ ಪ್ರದೇಶಗಳು ಸೇರಿದಂತೆ ಅಂತರರಾಜ್ಯ ಮಾರ್ಗಗಳಲ್ಲಿ ಅಕ್ರಮ ಮರಳು ಸಾಗಾಣಿಕೆಯನ್ನು ತಡೆಗಟ್ಟಲು ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ತನಿಖಾ ಕೇಂದ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ಅಗತ್ಯ ಮೂಲಸೌಕರ್ಯಗಳ ಕೊರತೆ ಕಂಡುಬಂದರೆ ಸಂಬಂಧಿತ ಇಲಾಖೆಯ ಗಮನಕ್ಕೆ ತರುವಂತೆ ನಿರ್ದೇಶಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments