ನವದೆಹಲಿ: ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದ್ದ ಸಾರ್ವಜನಿಕ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ಅಂಕಿತ ಹಾಕಿದ್ದಾರೆ.
ಈ ವಾರದ ಆರಂಭದಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಮಸೂದೆ ಮಂಡಿಸಿ ಧ್ವನಿಮತದ ಮೂಲಕ ಅಂಗೀಕರಿಸಿ ಕಳುಹಿಸಲಾಗಿದ್ದ ‘ಸಾರ್ವಜನಿಕ ಪರೀಕ್ಷೆಗಳು (ಅಕ್ರಮ ಮಾರ್ಗಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ, 2026’ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ.
ಮಸೂದೆಯು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ವಿಚಾರಣೆಯನ್ನು ತ್ವರಿತಗತಿಗೊಳಿಸಲು ಫಾಸ್ಟ್ ಟ್ರಾಕ್ ಕೋರ್ಟ್ ಸ್ಥಾಪನೆ ಮತ್ತು ತನಿಖೆಯನ್ನು ಎರಡು ತಿಂಗಳೊಳಗೆ ಪೂರ್ಣಗೊಳಿಸುವ ಜೊತೆಗೆ ಶಿಕ್ಷೆಯ ಪ್ರಮಾಣವನ್ನು ಹೆಚ್ಚಿಸುವ ಪ್ರಸ್ತಾಪ ಹೊಂದಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ತಪ್ಪಿತಸ್ಥರೆಂದು ಕಂಡುಬಂದ ವ್ಯಕ್ತಿಗಳು ಈಗ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 50 ಲಕ್ಷ ರೂ. ದಂಡವನ್ನು ತೆರಬೇಕಾಗುತ್ತದೆ. ಇನ್ನು ಅಂತಹ ಅಪರಾಧಗಳಲ್ಲಿ ಭಾಗಿಯಾಗಿರುವ ಸಂಘಟಿತ ಅಪರಾಧ ಸಿಂಡಿಕೇಟ್‌ಗಳಿಗೆ ಏಳರಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 10 ಕೋಟಿ ರೂ.ಗಳಿಂದ ಪ್ರಾರಂಭವಾಗುವ ದಂಡ ವಿಧಿಸಬಹುದು.
ಸಾರ್ವಜನಿಕ ಪರೀಕ್ಷೆ (ಅನ್ಯಾಯದ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ – 2026, ಯುಪಿಎಸ್‌ಸಿ, ನೀಟ್, ಜೆಇಇ, ಸಿಯುಇಟಿ ಮತ್ತು ಎಸ್‌ಎಸ್‌ಸಿ ಸೇರಿದಂತೆ ಪ್ರಮುಖ ರಾಷ್ಟ್ರೀಯ ಪ್ರವೇಶ ಮತ್ತು ನೇಮಕಾತಿ ಪರೀಕ್ಷೆಗಳಿಗೂ ಇದು ಅನ್ವಯವಾಗುತ್ತದೆ.



