ಬೆಂಗಳೂರು:ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಒಟ್ಟು 3,991 ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ಭರ್ತಿಗೆ ಭಾನುವಾರ ರಾಜ್ಯಾದ್ಯಂತ ಅಭೂತಪೂರ್ವ ಭದ್ರತೆ ಅಗತ್ಯ ಸಿದ್ದತೆಗಳ ಮಧ್ಯೆ ಸುಗಮವಾಗಿ ಲಿಖಿತ ಪರೀಕ್ಷೆ ನಡೆಯಿತು.
ರಾಜ್ಯದ 884 ಪರೀಕ್ಷಾ ಕೇಂದ್ರಗಳಲ್ಲಿ ಕಾನ್‌ಸ್ಟೇಬಲ್ ಹುದ್ದೆಗಳ ಭರ್ತಿಯ ಪರೀಕ್ಷೆಗೆ ಸುಮಾರು 4,54 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಿದ್ದರಿಂದ ಯಾವುದೇ ಅಡೆತಡೆಗಳು ಉಂಟಾಗದಂತೆ ಸುಸೂತ್ರವಾಗಿ ಪರೀಕ್ಷೆಗಳು ನಡೆದಿವೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಉಳಿಕ ಮೂಲ ವೃಂದದ 3,395 ಹುದ್ದೆ ಹಾಗೂ ಕಲ್ಯಾಣ ಕರ್ನಾಟಕ ವೃಂದದ 596 ಹುದ್ದೆಗಳಿಗೆ ಪರೀಕ್ಷೆ ನಡೆದಿದ್ದು, ಉಳಿಕ ಮೂಲ ವೃಂದದ 3,77,861 ಹಾಗೂ ಕಲ್ಯಾಣ ಕರ್ನಾಟಕ ವೃಂದದ 76,684 ಮಂದಿ ಅರ್ಜಿ ಸಲ್ಲಿಸಿದ್ದು, ಅಷ್ಟೂ ಮಂದಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತು ಎಂದು ಅವರು ವಿವರಿಸಿದ್ದಾರೆ.
ಬೆಳಿಗ್ಗೆ 10:30ರಿಂದ ಮಧ್ಯಾಹ್ನ 12ರವರೆಗೆ ರಾಜ್ಯದ ಎಲ್ಲರಿಗೂ ಹಾಗೂ ಸಂಜೆ 4 ರಿಂದ 5.30ರವರೆಗೆ ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆದಿದೆ.
ಪರೀಕ್ಷಾ ಅಕ್ರಮಗಳಿಗೆ ಬ್ರೇಕ್ ಹಾಕುವ ಉದ್ದೇಶದಿಂದ ಈ ಬಾರಿಯೂ ತಂತ್ರಜ್ಞಾನವನ್ನು ಗರಿಷ್ಠ ಮಟ್ಟದಲ್ಲಿ ಬಳಸಿ ಮುಖ ಚಹರೆ ಪತ್ತೆ ತಂತ್ರಜ್ಞಾನದ ಮೂಲಕವೇ ಅಭ್ಯರ್ಥಿಗಳನ್ನು ತಪಾಸಣೆ ಮಾಡಿ ಪರೀಕ್ಷಾ ಕೇಂದ್ರದೊಳಗೆ ಬಿಡಲಾಗಿತ್ತು.
ಪರೀಕ್ಷಾ ಕೇಂದ್ರ ಹಾಗೂ ಕೊಠಡಿಯಲ್ಲಿ ಸಿಸಿಟಿವಿ ಕಣ್ಗಾವಲು ಇರುತ್ತದೆ. ತಪಾಸಣೆ ಮತ್ತು ಸಿಸಿಟಿವಿ ಕಣ್ಗಾವಲಿನ ಜವಾಬ್ದಾರಿಯನ್ನು ಆಯಾ ಜಿಲ್ಲಾ ಪೊಲೀಸರು ನಿರ್ವಹಣೆ ಮಾಡಲಿದ್ದಾರೆ. ಒಟ್ಟಾರೆ ಪರೀಕ್ಷಾ ಮೇಲ್ವಿಚಾರಣೆಯನ್ನು ಆಯಾ ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿತ್ತು ಎಂದು ಅವರು ವಿವರಿಸಿದರು.
ಮೊಬೈಲ್ ಸೇರಿದಂತೆ ಎಲೆಕ್ಟ್ರಾನಿಕ್ ಸಾಧನಗಳ ಕಾರ್ಯನಿರ್ವಹಣೆಗೆ ನಿರ್ಬಂಧ ವಿಧಿಸಲು ಪರೀಕ್ಷಾ ಕೇಂದ್ರಗಳ ಸುತ್ತ ಜಾಮರ್ ಅಳವಡಿಸಲಾಗಿತ್ತು. ಪರೀಕ್ಷಾ ಕೇಂದ್ರ ಹಾಗೂ ಕೊಠಡಿಗಳ ಮೇಲೆ ತೀವ್ರ ನಿಗಾ ಇಡಲು ವೆಬ್ ಕಾಸ್ಟಿಂಗ್ ಮಾಡುತ್ತಿದ್ದು, ಅದನ್ನು ಜಿಲ್ಲಾ ಮಟ್ಟದಲ್ಲಿ ಆಯಾ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳೇ ಮೇಲ್ವಿಚಾರಣೆ ನಡೆಸಿದ್ದು, ಪ್ರಾಧಿಕಾರದ ಕಚೇರಿಯಲ್ಲಿ ಸ್ಥಾಪಿಸಿರುವ ಕಮಾಂಡ್ ಸೆಂಟರ್ ನಿಂದಲೂ ನಿರ್ವಹಣೆ ಮಾಡಲಾಯಿತು ಎಂದರು.
ಮೊಬೈಲ್, ಕ್ಯಾಮರಾ, ಬ್ಲೂಟೂತ್ ಸೇರಿದಂತೆ ಇತರ ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಗೆ ನಿಷೇಧ ಇದೆ. ಯಾವುದೇ ಕೈಗಡಿಯಾರ ಯಾವುದಕ್ಕೂ ಅವಕಾಶ ನೀಡಿರಲಿಲ್ಲ.



