ನವದೆಹಲಿ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಲೋಕಾಯುಕ್ತಕ್ಕೆ ನೋಟಿಸ್ ಜಾರಿ ಮಾಡಿದೆ.
ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಈಶ್ವರಪ್ಪ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಪ್ರಕರಣದ ಸಂಪೂರ್ಣ ವಿವರಗಳನ್ನು ಸಲ್ಲಿಸುವಂತೆ ಲೋಕಾಯುಕ್ತಕ್ಕೆ ಸೂಚಿಸಿದೆ.
ನ್ಯಾಯಮೂರ್ತಿ ಎಂ.ಎಂ.ಸುಂದರೇಶ್ ನೇತೃತ್ವದ ದ್ವಿಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿದ್ದು, ಲೋಕಾಯುಕ್ತಕ್ಕೆ ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯೆ ಸಲ್ಲಿಸುವಂತೆ ನಿರ್ದೇಶನ ನೀಡಿದೆ.
ಕೆ.ಎಸ್.ಈಶ್ವರಪ್ಪ, ಅವರ ಪುತ್ರ ಕೆ.ಇ.ಕಾಂತೇಶ್ ಹಾಗೂ ಸೊಸೆ ಶಾಲಿನಿ ಅವರು ತಮ್ಮ ಆದಾಯದ ಮೂಲಗಳಿಗೆ ಹೋಲಿಸಿದರೆ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಶಿವಮೊಗ್ಗದ ವಕೀಲ ಬಿ.ವಿನೋದ್ ಅವರು ದೂರು ಸಲ್ಲಿಸಿದ್ದರು.
ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ಈ ಹಿಂದೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಆದರೆ, ಈ ವರದಿಯನ್ನು ದೂರುದಾರರು ವಿಚಾರಣಾ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಪ್ರಕರಣದ ಕುರಿತು ಮರುತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿತ್ತು.
ಇದರ ಬೆನ್ನಲ್ಲೇ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಹೊಸ ಎಫ್‌ಐಆರ್ ದಾಖಲಿಸಿದ್ದರು. ಈ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಕೆ.ಎಸ್.ಈಶ್ವರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಹೈಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿತ್ತು.
ಹೈಕೋರ್ಟ್ ಆದೇಶ ಪ್ರಶ್ನಿಸಿ ಈಶ್ವರಪ್ಪ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು, ಇದೀಗ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ಲೋಕಾಯುಕ್ತಕ್ಕೆ ನೋಟಿಸ್ ಜಾರಿ ಮಾಡಿದೆ. ಪ್ರಕರಣದ ಮುಂದಿನ ಬೆಳವಣಿಗೆಗಳ ಬಗ್ಗೆ ಕುತೂಹಲ ಮೂಡಿದೆ.
