ನವದೆಹಲಿ: ದೇವಾಲಯಗಳಲ್ಲಿ ಪ್ರಾಣಿ ಬಲಿ ಸೇರಿದಂತೆ ಧಾರ್ಮಿಕ ಆಚರಣೆಗಳ ಸಂದರ್ಭದಲ್ಲಿ ಪ್ರಾಣಿಗಳನ್ನು ಕೊಲ್ಲುವುದನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.
ಅರ್ಜಿದಾರರ ವಾದವನ್ನು ಆಲಿಸಿದ ನ್ಯಾಯಮೂರ್ತಿ ವಿಕ್ರಮ್ ನಾಥ್, ನ್ಯಾಯಮೂರ್ತಿ ಆರ್. ಮಹಾದೇವನ್ ಮತ್ತು ನ್ಯಾಯಮೂರ್ತಿ ಕುಮಾರ್ ಸಿಂಗ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಅರ್ಜಿಯನ್ನು ವಜಾಗೊಳಿಸಿದೆ. ಇದಕ್ಕೂ ಮುನ್ನ ಸುಪ್ರೀಂ ಕೋರ್ಟ್ ಕೇಂದ್ರ ಪಶುಸಂಗೋಪನಾ ಸಚಿವಾಲಯದಿಂದ ಪ್ರತಿಕ್ರಿಯೆ ಕೇಳಿತ್ತು.
ಧಾರ್ಮಿಕ ವಿಧಿವಿಧಾನಗಳು ಮತ್ತು ಆಚರಣೆಗಳ ಭಾಗವಾಗಿ ಪ್ರಾಣಿಗಳನ್ನು ಕೊಲ್ಲುವುದಕ್ಕೆ ವಿನಾಯಿತಿ ನೀಡುವ ‘ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ, 1960’ರ ನಿಬಂಧನೆಗಳಿಗೆ ತಿದ್ದುಪಡಿ ತರಲು ನಿರ್ದೇಶನ ನೀಡುವಂತೆ ವಕೀಲೆ ಶ್ರುತಿ ಬಿಷ್ ಈ ಅರ್ಜಿಯನ್ನು ಸಲ್ಲಿಸಿದ್ದರು.
ಧಾರ್ಮಿಕ ಸಮಾರಂಭಗಳ ಸಂದರ್ಭದಲ್ಲಿ ಪ್ರಾಣಿಗಳನ್ನು ಕೊಲ್ಲುವುದನ್ನು ತಡೆಯಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿತ್ತು. ಪ್ರಾಣಿ ಬಲಿ ಪದ್ಧತಿಯು ಆರಂಭದಲ್ಲಿ ಕಡಿಮೆಯಾಗಿದ್ದರೂ, ಭಾರತದ ಹಲವಾರು ಭಾಗಗಳಲ್ಲಿ ಈಗಲೂ ಮುಂದುವರಿದಿದೆ ಎಂದು ಅರ್ಜಿದಾರರು ವಾದಿಸಿದ್ದರು.
ಹಿಮಾಲಯ ಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಈಶಾನ್ಯ ಭಾರತ ಹಾಗೂ ದಕ್ಷಿಣ ಭಾರತದಲ್ಲಿರುವ ಇಂತಹ ಆಚರಣೆಗಳನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ಧರ್ಮದ ಹೆಸರಿನಲ್ಲಿ ಪ್ರಾಣಿಗಳನ್ನು ಕೊಲ್ಲುವುದು ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಅವುಗಳ ಬದುಕುವ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಪ್ರತಿಪಾದಿಸಲಾಗಿತ್ತು.
