ಬೆಂಗಳೂರು: ರಾಜ್ಯ ಸರ್ಕಾರ ಜಿ.ಪಂ. ತಾಪಂ. ಕ್ಷೇತ್ರಗಳ ಮೀಸಲು ಅಂತಿಮ ಅಧಿಸೂಚನೆ ಪ್ರಕಟಿಸಿದ್ದು, ಜನವರಿಯಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ 30 ಜಿಲ್ಲೆಗಳ 1101 ಜಿಲ್ಲಾ ಪಂಚಾಯತಿ ಕ್ಷೇತ್ರಗಳಿ ಹಾಗೂ 234 ತಾಲೂಕು ಪಂಚಾಯತಿಗಳ 3580 ಸದಸ್ಯ ಸ್ಥಾನದ ಮೀಸಲು ನಿಗದಿ ಮಾಡಿ ರಾಜ್ಯ ಸರ್ಕಾರ ನಿನ್ನೆ ಅಂತಿಮ ಅಧಿಸೂಚನೆ ಹೊರಡಿಸಿದೆ ಎಂದರು.
2022ರಲ್ಲಿಯೇ ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಗಳ ಅವಧಿ ಪೂರ್ಣವಾಗಿತ್ತು. ಹಿಂದಿನ ಸರ್ಕಾರ ಚುನಾವಣೆ ನಡೆಸಿರಲಿಲ್ಲ. ನಮ್ಮ ಸರ್ಕಾರ ಕೆಲವು ಪಂಚಾಯತಿಗಳನ್ನು ಮೇಲ್ದರ್ಜೆಗೇರಿಸಿದ್ದರಿಂದ ಹಾಗೂ ಕೆಲವು ಗ್ರಾಮ ಪಂಚಾಯತಿ ಕ್ಷೇತ್ರಗಳು ನಗರಸಭೆ, ನಗರಪಾಲಿಕೆ, ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರಿದ ಪರಿಣಾಮವಾಗಿ ಕ್ಷೇತ್ರ ಪುನರ್ ವಿಂಗಡಣೆ ಅನಿವಾರ್ಯವಾಗಿತ್ತು. ಹೀಗಾಗಿ ವಿಳಂಬವಾಯಿತು ಎಂದು ತಿಳಿಸಿದರು.
ರಾಜ್ಯ ಸರ್ಕಾರ ತನ್ನ ಕರ್ತವ್ಯ ನಿಭಾಯಿಸಿದ್ದು, ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಘೋಷಿಸಿ ಚುನಾವಣೆ ನಡೆಸಲಿದೆ. ಬಹುತೇಕ ಜನವರಿಯಲ್ಲಿ ಚುನಾವಣೆಗಳು ನಡೆಯಲಿವೆ. ಕಾಂಗ್ರೆಸ್ ಪಕ್ಷ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸಲು ಸಂಪೂರ್ಣ ಸಜ್ಜಾಗಿದೆ ಎಂದರು.
