ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್ ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ನಡುವೆ ಜಟಾಪಟಿ ಮುಗಿಲು ಮುಟ್ಟಿದ್ದು, ಎರಡೂ ಪಕ್ಷಗಳಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರಿಂದ ಇದೇ ಮೊದಲ ಬಾರಿಗೆ ಚುನಾವಣೆ ನಡೆಯಲಿದೆ.
ಲೋಕಸಭಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಜೂನ್ 25 ಮಧ್ಯಾಹ್ನ 12 ಗಂಟೆ ಕೊನೆಯ ದಿನವಾಗಿತ್ತು. ಎರಡೂ ಬಣಗಳ ನಡುವೆ ಸಹಮತ ವ್ಯಕ್ತವಾಗದ ಹಿನ್ನೆಲೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಮಾಜಿ ಸ್ಪೀಕರ್ ಓಂಪ್ರಕಾಶ್ ಬಿರ್ಲಾ ಕಣಕ್ಕಿಳಿದಿದ್ದರೆ, ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಕೆ.ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.
ಲೋಕಸಭಾ ಸ್ಪೀಕರ್ ಸ್ಥಾನದ ಚುನಾವಣೆ ಜೂನ್ 26ರಂದು ನಡೆಯಲಿದ್ದು, ಇದಕ್ಕೂ ಮುನ್ನ ಯಾವ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆಯುತ್ತಾರೆ ಎಂಬುದು ಕಾದು ನೋಡಬೇಕಿದೆ.
ಪ್ರತಿಪಕ್ಷಗಳ ಜೊತೆ ಚರ್ಚಿಸಿ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರನ್ನು ಕಳುಹಿಸಿಕೊಟ್ಟಿತ್ತು. ಉಪ ಸ್ಪೀಕರ್ ಸ್ಥಾನ ನೀಡಿದರೆ ಸ್ಪೀಕರ್ ಸ್ಥಾನಕ್ಕೆ ಬೆಂಬಲ ನೀಡುವುದಾಗಿ ಕಾಂಗ್ರೆಸ್ ಷರತ್ತು ವಿಧಿಸಿತ್ತು. ಆದರೆ ಬಿಜೆಪಿ ಷರತ್ತಿಗೆ ಒಪ್ಪಿಗೆ ನೀಡದ ಕಾರಣ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯುವಂತಾಗಿದೆ.