ರಾಜ್ಯದಲ್ಲಿ ಡೆಂಘೇ ಜ್ವರ ಹೆಚ್ಚಾಗುತ್ತಿದೆ. ತಕ್ಷಣವೇ ಡೆಂಘೇಯನ್ನು ನಿಯಂತ್ರಣಕ್ಕೆ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿದರು.
ಸಭೆಯಲ್ಲಿ ಇಲಾಖಾವಾರು ಮಾಹಿತಿ ಪಡೆದ ಸಿದ್ದರಾಮಯ್ಯ, ಜಿಲ್ಲಾಧಿಕಾರಿಗಳು ಮಹಾರಾಜರಲ್ಲ. ಮಹಾರಾಜರು ಎಂಬ ಭಾವನೆ ನಿಮಗಿದ್ದರೆ ಅಭಿವೃದ್ಧಿ ಆಗಲ್ಲ. ಡೆಂಘೇ ನಿಯಂತ್ರಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಿ. ನಿರ್ಲಕ್ಷ್ಯ ಮಾಡಬೇಡಿ. ಒಂದು ವೇಳೆ ನಿರ್ಲಕ್ಷ್ಯ ಮಾಡಿದ್ದು ಕಂಡು ಬಂದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ ತಲುಪಿಸಲು ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಗಳು ಕ್ರಿಯಾಶೀಲತೆಯಿಂದ, ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರದ ಕಾಳಜಿಗಳು ಜನರಿಗೆ ತಲುಪಲು ಸಾಧ್ಯ ಎಂದರು.
ರಾಜ್ಯದಲ್ಲಿ ಡೆಂಘೇ ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕೆಲಸ ಮಾಡಿ. ಜಿಲ್ಲಾಧಿಕಾರಿಗಳು, ಜಿಲ್ಲಾ ವೈದ್ಯಾಧಿಕಾರಿಗಳು ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ಮಾಡಿ ಕ್ಷಿಪ್ರವಾಗಿ ಕೆಲಸ ಮಾಡಿ ಎಂದು ಸೂಚಿಸಿದರು.
ಇಷ್ಟು ದಿನ ಉದಾಸೀನ, ನಿರ್ಲಕ್ಷ್ಯಕ್ಕೆ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಸಂಪುಟದ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪಾಲ್ಗೊಂಡಿದ್ದರು.