ಬೆಂಗಳೂರು ಹೆಸರನ್ನು ಉಳಿಸಿಕೊಳ್ಳುವ ಉದ್ದೇಶದಿಂದ ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡಲು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ, ರಾಮನಗರ, ಮಾಗಡಿ, ಕನಕಪುರ ಮತ್ತು ಹಾರೋಹಳ್ಳಿ ಸೇರಿಸಿ ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಬೇಕೆಂದು ತಮ್ಮ ನೇತೃತ್ವದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ನಿಯೋಗ ಸಿಎಂಗೆ ಮನವಿ ಮಾಡಿದೆ ಎಂದರು.
ರಾಮನಗರ ಜಿಲ್ಲೆಯ ಬದಲಾವಣೆ ಮಾಡುವುದಿಲ್ಲ. ರಾಮನಗರದಲ್ಲಿಯೇ ಈಗಿರುವಂತೆ ಆಡಳಿತ ಕೇಂದ್ರ ಇರುತ್ತದೆ. ಆದರೆ ಹೆಸರು ಮಾತ್ರ ಬೆಂಗಳೂರು ದಕ್ಷಿಣ ಎಂದು ಜಿಲ್ಲೆಯ ಹೆಸರು ಬದಲಾವಣೆ ಮಾಡಲಾಗುವುದು. ಈ ಮೂಲಕ ಬೆಂಗಳೂರು ಹೆಸರು ಉಳಿಸಿಕೊಳ್ಳುವ ಮೂಲಕ ಈ ಭಾಗದ ಜನರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಅವರು ಹೇಳಿದರು.
ಬೆಂಗಳೂರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರಿದೆ. ಈ ಹೆಸರಿನಿಂದ ಈ ಭಾಗದ ಜನರ ಭೂಮಿಯ ಬೆಲೆ ಏರಿಕೆಯಾಗಲಿದೆ. ಅಲ್ಲದೇ ಕೈಗಾರಿಕೆಗಳು ಬರಲಿವೆ. ಮೈಸೂರಿಗೂ ಸಾಕಷ್ಟು ಅನುಕೂಲ ಆಗಿದೆ. ಈ ದೃಷ್ಟಿಯಿಂದ ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರನಾಮಕರಣ ಮಾಡಲಾಗುದು. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ನಿಯೋಗ ಮನವಿ ಮಾಡಿದ್ದು, ಅವರು ಕೂಡ ಈ ಬಗ್ಗೆ ಚಿಂತನೆ ನಡೆಸಲಿದ್ದಾರೆ ಎಂದು ಅವರು ವಿವರಿಸಿದರು.
ನಿಯೋಗದಲ್ಲಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಶಾಸಕ ಇಕ್ಬಾಲ್ ಹುಸೈನ್, ಮಾಜಿ ಸಂಸದ ಡಿ ಕೆ ಸುರೇಶ್, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಎಸ್ ರವಿ, ಸುಧಾಮದಾಸ್, ಬೆಂಗಳೂರು ಮೈಸೂರು ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರದೇಶ ಯೋಜನೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಘುನಂದನ್ ರಾಮಣ್ಣ, ಮಾಜಿ ಶಾಸಕರಾದ ಸಿ ಎಂ ಲಿಂಗಪ್ಪ, ರಾಜು, ಅಶ್ವಥ್ ಮತ್ತಿತರರು ಉಪಸ್ಥಿತರಿದ್ದರು.