23 ಶಾಲಾ ವಾಹನಗಳ ಚಾಲಕರು ಮದ್ಯ ಸೇವಿಸಿ ವಾಹನ ಚಲಾಯಿಸುವಾಗ ಬೆಂಗಳೂರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಲೈಸೆನ್ಸ್ ರದ್ದುಗೊಳಿಸಲಾಗಿದೆ.
ಬೆಂಗಳೂರು ಪೊಲೀಸರು ಬೆಳಿಗ್ಗೆ 7.30ರಿಂದ 9.30ರ ಅವಧಿಯಲ್ಲಿ ಶಾಲಾ ವಾಹನಗಳ ಚಾಲಕರನ್ನು ತಪಾಸಣೆಗೊಳಪಡಿಸಲಾಗಿದ್ದು, 23 ವಾಹನ ಚಾಲಕರು ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿರುವುದು ದೃಢಪಟ್ಟಿದೆ ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.
ನಗದಾದ್ಯಂತ 3016 ಶಾಲಾ ವಾಹನಗಳನ್ನು ತಪಾಸಣೆಗೊಳಪಡಿಸಲಾಗಿದೆ. ಇದರಲ್ಲಿ 23 ವಾಹನ ಚಾಲಕರು ಮದ್ಯ ಸೇವಿಸಿ ಕಾರು ಚಲಾಯಿಸುತ್ತಿರುವುದು ತಪಾಸಣೆ ವೇಳೆ ಬೆಳಕಿಗೆ ಬಂದಿದೆ. ಚಾಲಕರು ನಿಗದಿತ ಪ್ರಮಾಣಕ್ಕಿಂತ ಅಂದರೆ 186 ಎಂಎಲ್ ಮದ್ಯ ಸೇವಿಸಿರುವುದು ಪತ್ತೆಯಾಗಿದೆ ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.
ಡ್ರಿಂಕ್ ಅಂಡ್ ಡ್ರೈವ್ ಕೇಸನ್ನು ಚಾಲಕರ ವಿರುದ್ಧ ದಾಖಲಿಸಿಕೊಳ್ಳಲಾಗಿದ್ದು, ಅವರ ಲೈಸೆನ್ಸ್ ರದ್ದು ಸೇರಿದಂತೆ ಸೂಕ್ತ ಕ್ರಮ ಕೈಗೊಳ್ಳಲು ಆರ್ ಟಿಒಗೆ ಪತ್ರ ಬರೆಯಲಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ.
ಇದೇ ವೇಳೆ ಬೆಂಗಳೂರು ಪೊಲೀಸರು ಶಾಲಾ ವಾಹನಗಳ ಗುಣಮಟ್ಟ ಕುರಿತು ಪರಿಶೀಲನೆ ನಡೆಸಲಾಯಿತು. ಈ ವೇಳೆ 11 ಬಸ್ ಗಳಿಗೆ ಫಿಟ್ನೆಸ್ ಪ್ರಮಾಣಪತ್ರ ಇಲ್ಲದೇ ಇರುವುದು ಪತ್ತೆಯಾಗಿದೆ.
ಈ ವಾಹನಗಳನ್ನು ಕೂಡ ಆರ್ ಟಿಓ ಕಚೇರಿಗಳಿಗೆ ಕಳುಹಿಸಿಕೊಡಲಾಗಿದ್ದು, ಶಾಲಾ ಆಡಳಿತ ಮಂಡಳಿ ಹಾಗೂ ಶಾಲಾ ವಾಹನಗಳ ಮಾಲೀಕರ ವಿರುದ್ಧ ಕ್ರಮಕೈಗೊಳ್ಳಲು ಸೂಚಿಸಲಾಗಿದೆ ಎಂದು ಪೊಲೀಸರು ವಿವರಿಸಿದರು.
ಇತ್ತೀಚೆಗೆ ಶಾಲಾ ವಾಹನಗಳು ಪದೇಪದೆ ಸಂಚಾರಿ ನಿಯಮ ಉಲ್ಲಂಘಿಸುತ್ತಿರುವುದು, ಅತಿ ವೇಗವಾಗಿ ವಾಹನ ಚಲಾಯಿಸುತ್ತಿರುವ ದೂರುಗಳು ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಬೆಂಗಳೂರಿ ಶಾಲಾ ವಾಹನಗಳು ಮತ್ತು ಶಾಲಾ ವಾಹನಗಳ ಚಾಲಕರನ್ನು ತಪಾಸಣೆಗೊಳಪಡಿಸಲು ವಿಶೇಷ ತಂಡ ರಚಿಸಿ ಪರಿಶೀಲನೆ ನಡೆಸಿತು.